ಮೈಸೂರು: ಜಿಲ್ಲೆಯಲ್ಲಿ ಇದುವರೆಗೆ ಒಂದೇ ಒಂದು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ತಿಳಿಸಿದರು.
ಇಂದು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಇಲ್ಲಿವರೆಗೆ 107 ಜನರನ್ನು ಸ್ಕ್ರೀನಿಂಗ್ ಮಾಡಲಾಗಿದೆ. ಈ ಪೈಕಿ 51 ಜನರನ್ನು ಮನೆಯಲ್ಲಿ ಇರಿಸಿ ನಿಗಾವಹಿಸಲಾಗಿದೆ. ಇದರಲ್ಲಿ ಒಬ್ಬ ವ್ಯಕ್ತಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇಲ್ಲಿಯವರೆಗೂ ಯಾರಲ್ಲೂ ಸಹ ಕೊರೊನಾ ಇರುವ ಬಗ್ಗೆ ವರದಿ ಬಂದಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಹೆಚ್ಚು ಜನ ಒಂದುಕಡೆ ಸೇರದಂತೆ ಎಚ್ಚರಿಕೆವಹಿಸಲಾಗಿದೆ. ಜಿಲ್ಲೆಯಾದ್ಯಂತ ಸಭೆ, ಸಮಾಂರಭ, ಜಾತ್ರಾ ಮಹೋತ್ಸವ, ದೇವರ ಉತ್ಸವವನ್ನು ನಡೆಸದಂತೆ ತಿಳಿಸಲಾಗಿದೆ. ಜೊತೆಗೆ ದೇವಾಲಯದಲ್ಲಿ ಪ್ರಸಾದ ವಿತರಣೆಗೆ ನಿರ್ಬಂಧ ಹೇರಲಾಗಿದೆ. ಆದರೆ ಪ್ರತಿನಿತ್ಯದ ದೇವಾಲಯದಲ್ಲಿ ಪೂಜಾ ವಿಧಿವಿಧಾನಗಳಿಗೆ ಯಾವುದೇ ನಿರ್ಬಂಧ ಹೇರಲಾಗಿಲ್ಲ ಎಂದು ಮಾಹಿತಿ ನೀಡಿದರು.
ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಪ್ರಮುಖ ಖಾಸಗಿ ಆಸ್ಪತ್ರೆಗಳಲ್ಲಿ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದೆ. ನಗರದ ಕೆ.ಆರ್.ಆಸ್ಪತ್ರೆಯಲ್ಲಿ 10 ಹಾಸಿಗೆಯುಳ್ಳ ವಿಶೇಷ ವಾರ್ಡ್ ತೆರೆಯಲಾಗಿದೆ ಎಂದು ಹೇಳಿದರು.