ಮೈಸೂರು: ಕಾರು ಚಾಲಕನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಹೋಂ ಕ್ವಾರಂಟೈನ್ ನಲ್ಲಿದ್ದು , ಇವರ ಜೊತೆಗೆ ಇತರ ಉನ್ನತ ಅಧಿಕಾರಿಗಳು ಸಹ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಜಿಲ್ಲೆಯಲ್ಲಿ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಹೋಂ ಕ್ವಾರಂಟೈನ್ಗೆ ಒಳಪಟ್ಟಿದ್ದಾರೆ. ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಹಾಗೂ ಎಸ್ ಪಿ ರಿಷ್ಯಂತ್ ಸೇರಿದಂತೆ ಇತರರು ಹೋಂ ಕ್ವಾರಂಟೈನ್ಗೆ ಒಳಪಟ್ಟಿದ್ದಾರೆ.
ಕಾರು ಚಾಲಕನಿಗೆ ಸೋಂಕು ದೃಢಪಟ್ಟ ಹಿನ್ನೆಲೆ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಮಂಗಳವಾರದಿಂದ ಕ್ವಾರಂಟೈನ್ ನಲ್ಲಿದ್ದಾರೆ. ಜೊತೆಗೆ ಕಚೇರಿ ಸಿಬ್ಬಂದಿಗೆ ಸೋಂಕು ಪಾಸಿಟಿವ್ ಕಂಡು ಬಂದ ಕಾರಣ ಗುರುದತ್ತ ಹೆಗಡೆ ಕ್ವಾರಂಟೈನ್ನಲ್ಲಿ ಇದ್ದಾರೆ. ಡಾ.ಚಂದ್ರಗುಪ್ತ ಅವರು ಮುಂಜಾಗ್ರತಾ ಕ್ರಮವಾಗಿ ಸ್ವಯಂ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದು, ಕೊರೊನಾ ಸೋಂಕು ತಗುಲಿದ ಸಿ.ಬಿ ರಿಷ್ಯಂತ್ ಸೋಮವಾರದಿಂದಲೇ ಕ್ವಾರಂಟೈನ್ ನಲ್ಲಿದ್ದಾರೆ.
21 ರಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬರುತ್ತಿದ್ದು, ಆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.