ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿರುವ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಮತ್ತು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಜಿಲ್ಲಾಡಳಿತದಿಂದ ಅಧಿಕೃತವಾಗಿ ಆಹ್ವಾನಿಸಲಾಯಿತು.
ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ. ರಾಮದಾಸ್, ಎಲ್. ನಾಗೇಂದ್ರ, ಮೇಯರ್ ಸುನಂದಾ ಪಾಲನೇತ್ರ, ಮುಡಾ ಅಧ್ಯಕ್ಷ ಹೆಚ್.ವಿ. ರಾಜೀವ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ ಮತ್ತಿತರ ಅಧಿಕಾರಿಗಳು ಅರಮನೆಗೆ ತೆರಳಿ ಸಂಪ್ರದಾಯದಂತೆ ರಾಜವಂಶಸ್ಥರನ್ನು ಆಹ್ವಾನಿಸಿದರು.
ಈ ಹಿಂದೆ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಧಾನಿಯೊಂದಿಗೆ ರಾಜ್ಯಪಾಲರು, ಮುಖ್ಯಮಂತ್ರಿ, ಕೇಂದ್ರ ಸಚಿವರಿಗೆ ಮಾತ್ರ ಅವಕಾಶ ಇರಲಿದೆ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿರೋಧಿ ಅಭಿಯಾನ ನಡೆದಿತ್ತು. ಇದರಿಂದ ಎಚ್ಚೆತ್ತ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ರಾಜವಂಶಸ್ಥರಿಗೆ ಆಮಂತ್ರಣ ನೀಡಿದ್ದಾರೆ.
ಜೂನ್ 21ರಂದು ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜವಂಶಸ್ಥರ ಆಹ್ವಾನದ ಮೇರೆಗೆ ಅವರ ನಿವಾಸದಲ್ಲಿ ಉಪಾಹಾರ ಸೇವಿಸಲಿದ್ದಾರೆ.
ಇದನ್ನೂ ಓದಿ: ಅಗ್ನಿಪಥ್ ಹಿಂಸಾತ್ಮಕ ಹೋರಾಟದ ಹಿಂದೆ ಪ್ರತಿಪಕ್ಷಗಳ ಪಿತೂರಿ ಇದೆ: ಸಚಿವ ಪ್ರಹ್ಲಾದ್ ಜೋಶಿ