ಮೈಸೂರು: ಬಿಜೆಪಿ ರಾಜಕೀಯ ಐಡಿಯಾಲಜಿಗಿಂತ ಜಾತಿ ಹಾಗೂ ಧರ್ಮದ ಆಧಾರದಲ್ಲಿ ಆಡಳಿತ ನಡೆಸುತ್ತ ಪ್ರಜಾಪ್ರಭುತ್ವದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಟೀಕಿಸಿದರು.
ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಉತ್ತರಪ್ರದೇಶದಲ್ಲಿ ಅಕ್ರಮ ವಲಸಿಗರು ಸಿಕ್ಕಿದ್ದಾರೆ ಎಂದು ಅಲ್ಲಿನ ಸರ್ಕಾರ ಹೇಳುತ್ತದೆ. ದೇಶದೊಳಗೆ ನುಸುಳುಕೋರರು ಬರಲು ಯಾರು ಕಾರಣ? ಹಾಗಾದ್ರೆ, ಗುಪ್ತಚರ ಇಲಾಖೆ ಏನು ಮಾಡುತ್ತಿದೆ? ಎಂದು ಪ್ರಶ್ನಿಸಿದರು.
ಪ್ರಧಾನಿ ಮೋದಿ ವಿರುದ್ಧ ಮಕ್ಕಳು ನಾಟಕ ಮಾಡುತ್ತಿದ್ದಾರೆ ಎಂದು ಅವರನ್ನು ಠಾಣೆಗೆ ಕರೆದುಕೊಂಡು ಹೋಗಿ ಕೂರಿಸಿಕೊಂಡಿದ್ದು ಸರಿಯಲ್ಲ. ಸಂವಿಧಾನದಲ್ಲಿ ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. ಆದ್ರೆ ಬಿಜೆಪಿ ಈ ಹಕ್ಕನ್ನು ಕಸಿಯುತ್ತಿದೆ. ಬಿಜೆಪಿ ಮುಖಂಡ ಬಿ.ಎಲ್.ಸಂತೋಷ್ ಅವರು ಸಿಎಎ ಪರವಾಗಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.
ಫೆ.2ರಂದು ಮೈಸೂರಿನಲ್ಲಿ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ವಿರುದ್ಧ ರಾಷ್ಟ್ರೀಯ ವಿಚಾರ ಸಂಕಿರಣವನ್ನು ನಡೆಸಲಾಗುವುದು ಎಂದರು. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ. ಪಕ್ಷದ ಹೈಕಮಾಂಡ್ ಅದನ್ನು ತೀರ್ಮಾನ ಮಾಡುತ್ತದೆ ಎಂದು ಮಹದೇವಪ್ಪ ಸ್ಪಷ್ಟನೆ ನೀಡಿದರು.