ಮೈಸೂರು: "ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ದೇಶನಗಳನ್ನು ಪಾಲಿಸಿ, ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಿ" ಎಂದು ಭಾರತೀಯ ಚುನಾವಣಾ ಆಯೋಗದ ನಿರ್ದೇಶಕರಾದ ಶುಭ್ರ ಸೆಕ್ಸೆನಾ ಅವರು ಅಧಿಕಾರಿಗಳಿಗೆ ತಿಳಿಸಿದರು. ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆದ ಚುನಾವಣಾ ಪೂರ್ವ ಸಿದ್ಧತೆಗಳ ಕುರಿತು ಮೈಸೂರು ವಿಭಾಗದ 8 ಜಿಲ್ಲೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
"ಭಾರತೀಯ ಚುನಾವಣಾ ಆಯೋಗವು ನೀಡಿರುವ ಸೂಚನೆ ಹಾಗೂ ನಿರ್ದೇಶನಗಳನ್ವಯ ಪ್ರತಿಯೊಂದು ಮತಗಟ್ಟೆಗಳಿಗೆ ಪೊಲೀಸ್ ವರಿಷ್ಠಾಧಿಕಾರಿಯವರು ಕಡ್ಡಾಯವಾಗಿ ಭೇಟಿ ನೀಡಬೇಕು ಮತ್ತು ಪರಿಶೀಲಿಸಬೇಕು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತದಾನದ ವೇಳೆ ಮತಗಟ್ಟೆಯಲ್ಲಿರುವ ಮೂಲಭೂತ ಸೌಕರ್ಯಗಳು ವ್ಯವಸ್ಥಿತವಾಗಿ ಇರುವಂತೆ ನೋಡಿಕೊಳ್ಳಬೇಕು. ಚುನಾವಣೆ ಘೋಷಣೆಯಾದ ಮೇಲೆ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಪರಾಧಗಳು ನಡೆದರೂ ಅದು ಚುನಾವಣಾ ಸಂಬಂಧಿತ ಅಪರಾಧಗಳ ಪಟ್ಟಿಗೆ ಸೇರುತ್ತದೆ" ಎಂದು ತಿಳಿಸಿದರು.
ಇದನ್ನೂ ಓದಿ: ಸಿದ್ದರಾಮಯ್ಯ ಯಾದಗಿರಿಯಿಂದ ಸ್ಪರ್ಧಿಸಿದ್ರೆ ₹1 ಕೋಟಿ ನೀಡುವೆ: 20 ಲಕ್ಷದ 5 ಚೆಕ್ ಬರೆದಿಟ್ಟ ಬಿಜೆಪಿ ಮುಖಂಡ!
ಬಳಿಕ 2018ರ ವಿಧಾನಸಭಾ ಚುನಾವಣೆ ಮತ್ತು 2019ರ ಲೋಕಸಭಾ ಚುನಾವಣೆ ಸಂಬಂಧಿತ ಅಪರಾಧಗಳ ಬಗ್ಗೆ ಜಿಲ್ಲಾವಾರು ಅಂಕಿ-ಅಂಶಗಳ ಬಗ್ಗೆ ಮಾಹಿತಿ ಪಡೆದುಕೊಂಡರು. "ಚುನಾವಣಾ ಸಂಬಂಧಿತ ಅಪರಾಧಗಳ ಬಗ್ಗೆ ಆಳವಾಗಿ ಪರಿಶೀಲನೆ ನಡೆಸಬೇಕು. ಇಲ್ಲದಿದ್ದರೆ ಸಂದರ್ಭದ ಮೇಲೆ ನಿಯಂತ್ರಣ ಸಾಧಿಸಲು ಸಾಧ್ಯವಾಗುವುದಿಲ್ಲ. ಇಂತಹ ಅಪರಾಧಗಳು ಮುಂದಿನ ಚುನಾವಣೆಯ ಮೇಲೂ ಪ್ರಭಾವ ಬೀರುತ್ತವೆ. ಮತದಾರರ ಅಂತಿಮ ಪಟ್ಟಿ ಪ್ರಕಟವಾಗಿದ್ದು ಲಿಸ್ಟ್ನಲ್ಲಿ ಅವರ ಹೆಸರು ಇದೆಯೋ, ಇಲ್ಲವೋ ಎಂಬುದನ್ನು ಕಡ್ಡಾಯವಾಗಿ ಪರಿಶೀಲಿಸಬೇಕು ಮತ್ತು ಈ ಬಗ್ಗೆ ಯಾವುದೇ ದೂರುಗಳು ಬಂದಲ್ಲಿ ಅಧಿಕಾರಿಗಳು ತಕ್ಷಣವೇ ಸೂಕ್ತ ಕ್ರಮವಹಿಸಬೇಕು. ಆದಿವಾಸಿಗಳು ಚುನಾವಣಾ ಪ್ರಕ್ರಿಯೆಯಿಂದ ಬಿಟ್ಟು ಹೋಗದಂತೆ ಅಧಿಕಾರಿಗಳು ಸೂಕ್ತ ಕ್ರಮ ಕೈಕೊಂಡು ಅವರ ಮತದಾನದ ನೋಂದಣಿಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು" ಎಂದು ಹೇಳಿದರು.
ಸಭೆಯಲ್ಲಿ ಭಾರತೀಯ ಚುನಾವಣಾ ಆಯೋಗದ ಕಾರ್ಯನಿರ್ವಹಣಾಧಿಕಾರಿಗಳಾದ ಬಿ.ಸಿ. ಪಾತ್ರ, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ ಪ್ರಕಾಶ್, ಮೈಸೂರು ವಿಭಾಗದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತ ರೆಡ್ಡಿ , ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ , ಚುನಾವಣಾ ತಹಶೀಲ್ದಾರ್ ರಾಮ್ ಪ್ರಸಾದ್ ಮತ್ತು ರಿಟರ್ನಿಂಗ್ ಆಫೀಸರ್ಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ’ಇಡೀ ದೇಶದಲ್ಲಿ SC/ST ಬಡ್ತಿ ಮೀಸಲಾತಿ ನೀಡುವ ಕಾನೂನು ಮಾಡಿದ್ದು ನಾನು’: ವಿಪಕ್ಷ ನಾಯಕ ಸಿದ್ದರಾಮಯ್ಯ
ಚುನಾವಣೆಗೆ ಪಕ್ಷಗಳಿಂದ ತಯಾರಿ: ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಎಲ್ಲಾ ಪಕ್ಷಗಳು ಸಾಕಷ್ಟು ತಯಾರಿಗಳನ್ನು ನಡೆಸುತ್ತಿವೆ. ಯಾವ ಕ್ಷೇತ್ರದಿಂದ ಯಾರನ್ನು ನಿಲ್ಲಿಸಿದರೇ ಪಕ್ಷಕ್ಕೆ ಗೆಲುವು ಎಂಬುದರ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಎಲ್ಲಾ ಪಕ್ಷದ ನಾಯಕರು ತಮ್ಮ ಬೆಂಬಲಿಗರೊಂದಿಗೆ ಸಭೆಗಳನ್ನು ನಡೆಸಿ ವಿಜಯದ ತಂತ್ರವನ್ನು ಹೆಣೆಯುತ್ತಿದ್ದಾರೆ.