ಮೈಸೂರು: ಆನೆ ದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರ ದಳದ ಅಧಿಕಾರಿಗಳು ಪಿರಿಯಾಪಟ್ಟಣ ತಾಲೂಕಿನ ಆನೆಚೌಕೂರು ಬಳಿ ಬಂಧಿಸಿ, ದಂತ ವಶಪಡಿಸಿಕೊಂಡಿದ್ದಾರೆ.
ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಆನೆ ದಂತವನ್ನು ಕದ್ದು, ಅದನ್ನು ಮಾರಾಲು ಯತ್ನಿಸಿದ ಸುರೇಶ್ ಹಾಗೂ ಚೇತನ್ ಎಂಬುವವರನ್ನು ಪಿರಿಯಾಪಟ್ಟಣ ತಾಲೂಕಿನ ಆನೆಚೌಕೂರು ಬಳಿ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರ ದಳದ ಸಿಬ್ಬಂದಿ ಬಂಧಿಸಿದ್ದು , ಬಂಧಿತರಿಂದ 20 ಕೆಜಿ ತೂಕದ ಒಂದು ಆನೆ ದಂತ ವಶಪಡಿಸಿಕೊಂಡಿದ್ದಾರೆ. ಬಂಧಿತರು ಬಳಸುತ್ತಿದ್ದ ಕಾರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಈ ಕೃತ್ಯದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಸಂಚಾರ ದಳದ ಪೊಲೀಸರು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.