ಮೈಸೂರು: ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರ್ನಾಟಕ ರಾಜ್ಯ ರೈತ ವಿರೋಧಿ ಕಾಯ್ದೆ ಹೋರಾಟ ಸಮಿತಿ ವತಿಯಿಂದ ಸರ್ಕಾರದ ವಿರುದ್ಧ ಬಾರುಕೋಲು ಚಳುವಳಿ ಮೂಲಕ ಪ್ರತಿಭಟನೆ ನಡೆಸಲಾಯಿತು.
ನಗರದ ಗನ್ ಹೌಸ್ ವೃತ್ತದಿಂದ ಹೊರಟ ಬಾರುಕೋಲು ಚಳುವಳಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಪ್ರಾದೇಶಿಕ ಆಯುಕ್ತರ ಕಚೇರಿಗೆ ತೆರಳಿ ನಂತರ ಪ್ರಾದೇಶಿಕ ಆಯುಕ್ತರಿಗೆ ಕಾಯ್ದೆ ಹಿಂಪಡೆಯುವಂತೆ ಮನವಿ ಮಾಡಿದರು.
ಮೈಸೂರು-ಚಾಮರಾಜನಗರ ಮಂಡ್ಯ ಜಿಲ್ಲೆಗಳಿಂದ ಆಗಮಿಸಿದ್ದ ರೈತ ಸಂಘಟನೆಗಳ ಸದಸ್ಯರು, ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಜಾರಿಗೆ ತರಲು ಹೊರಟಿದೆ. ಇದರಿಂದ ಬಂಡವಾಳಶಾಹಿಗಳು, ಭೂ ಮಾಫಿಯಾದವರು, ಕೈಗಾರಿಕೋದ್ಯಮಿಗಳು ಕೃಷಿ ಭೂಮಿ ಖರೀದಿಸಿ ಪಾಳು ಬಿಡುತ್ತಾರೆ. ಇದರಿಂದ ಕೃಷಿ ಕುಂಠಿತವಾಗುತ್ತದೆ ಎಂದು ಕಿಡಿಕಾರಿದರು.
ಬಿಜೆಪಿಯವರು ಅಧಿಕಾರಕ್ಕೆ ಬರುವ ಮೊದಲು ಸ್ವದೇಶಿ ಉತ್ಪಾದನೆಗೆ ಜನರನ್ನು ಪ್ರೇರೇಪಿಸುತ್ತಿದ್ದರು. ಅಧಿಕಾರಕ್ಕೆ ಬಂದ ನಂತರ ಬಹುರಾಷ್ಟ್ರೀಯ ಕಾರ್ಪೋರೇಟ್ ಕಂಪನಿಗಳಿಗೆ ಕೃಷಿ ಚಟುವಟಿಕೆ ನಡೆಸಲು ಅವಕಾಶ ನೀಡಿ, ಸ್ವದೇಶಿ ವಿಚಾರಗಳಿಗೆ ತಿಲಾಂಜಲಿ ಇಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ 22 ಲಕ್ಷ ಹೆಕ್ಟೇರ್ ಉದ್ದಿಮೆಯ ನೆಪದಲ್ಲಿ ಕೃಷಿ ಭೂಮಿ ಉಳ್ಳವರ ಪಾಲಾಗುತ್ತಿದೆ. ಇದರಿಂದ ಸಣ್ಣಪುಟ್ಟ ರೈತರಿಗೆ ಭಾರೀ ಹೊಡೆತ ಬೀಳಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ರಾಜ್ಯ ಸರ್ಕಾರ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಿ ಉಗಿಯುವ ಚಳವಳಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.