ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ನೂರಾರು ರೈತರು ಮೈಸೂರಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಯ ಎದುರು ಇಂದು ಧರಣಿ ನಡೆಸಲು ಮುಂದಾಗಿದ್ದರು. ಈ ವೇಳೆ ರೈತರು ಹಾಗೂ ಪೋಲಿಸರು ನಡುವೆ ವಾಗ್ವಾದ ನಡೆಯಿತು. ಹಲವು ರೈತರನ್ನು ಪೊಲೀಸರು ವಶಕ್ಕೆ ಪಡೆದರು.
ಮುಂಜಾಗ್ರತಾ ಕ್ರಮವಾಗಿ ಮುಖ್ಯಮಂತ್ರಿ ಮನೆಯ ಸುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಸಿಎಂ ನಿವಾಸವಿರುವ ಟಿ.ಕೆ.ಬಡಾವಣೆಯ ಮುಂಭಾಗದಲ್ಲಿ ರಾಜ್ಯ ರೈತ ಸಂಘಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರೈತರು ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ, ಕಬ್ಬಿನ ಬಾಕಿ ಹಣ ಬಿಡುಗಡೆ ಮಾಡುವಂತೆ ಹಾಗೂ ಕಬ್ಬಿಗೆ ಹೆಚ್ಚುವರಿ ದರ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ಸಿಎಂ ಮನೆ ಮುಂಭಾಗದ ಶಾರದಾ ದೇವಿ ವೃತ್ತದಲ್ಲಿ ಪ್ರತಿಭಟನೆಗೆ ಕೈಗೊಳ್ಳುವ ಸಂದರ್ಭದಲ್ಲಿ, ಪೊಲೀಸರು ಇದ್ದಕ್ಕಿದ್ದಂತೆ ರೈತರನ್ನು ವಶಕ್ಕೆ ಪಡೆದುಕೊಳ್ಳಲು ಮುಂದಾದರು. ಈ ಸಮಯದಲ್ಲಿ ಪೊಲೀಸರು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆಯಿತು. ರೈತರ ಪ್ರತಿಭಟನೆಗೆ ಅವಕಾಶ ನೀಡದೇ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡರು. ರೈತ ಮಹಿಳೆಯರು ಪೊಲೀಸ್ ಜೀಪ್ನಲ್ಲೇ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅವರನ್ನು ಬೇರೆ ವಾಹನದಲ್ಲಿ ಕರೆದುಕೊಂಡು ಹೋಗಲಾಯಿತು.
ಪ್ರತಿಭಟನೆ ಹಿನ್ನೆಲೆಯಲ್ಲಿ, ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ನಿವಾಸ ಹಾಗೂ ನಿವಾಸಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಸುಮಾರು 2 ಕಿ.ಮೀ. ದೂರದವರೆಗೆ ಭದ್ರತೆ ಒದಗಿಸಲಾಗಿತ್ತು. ವಿಜಯ ಬ್ಯಾಂಕ್ ಸರ್ಕಲ್, ಆಂದೋಲನ ಸರ್ಕಲ್, ಶಾರದಾ ದೇವಿ ನಗರದ ಸರ್ಕಲ್ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿತ್ತು.
ಇದನ್ನೂ ಓದಿ: ಹೈಕಮಾಂಡ್ ಸೂಚನೆಯಂತೆ ಚುನಾವಣಾ ರಾಜಕೀಯದಿಂದ ಸದಾನಂದಗೌಡ ನಿವೃತ್ತಿ: ಬಿ ಎಸ್ ಯಡಿಯೂರಪ್ಪ