ಮೈಸೂರು : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ರೈತರು ಅರೆಬೆತ್ತಲೆ ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ನಗರದ ನ್ಯಾಯಾಲಯದ ಮುಂಭಾಗವಿರುವ ಗಾಂಧೀಜಿ ಪುತ್ಥಳಿ ಮುಂದೆ ಜಮಾಯಿಸಿದ ಕರ್ನಾಟಕ ರಾಜ್ಯ ಕಬ್ಬುಬೆಳೆಗಾರರ ಸಂಘ ಹಾಗೂ ವಿವಿಧ ರೈತಪರ ಸಂಘಟನೆಗಳ ರೈತರು, ರಾಜ್ಯ ಸರ್ಕಾರ ಏಕಾಏಕಿ ಭೂ ಸುಧಾರಣೆ ಕಾಯ್ದೆಯನ್ನ ತಿದ್ದುಪಡಿ ಮಾಡುವ ಮೂಲಕ ರೈತರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಇದರಿಂದ ಭೂ ಮಾಲೀಕರಿಗೆ ಅನುಕೂಲ ಮಾಡಿಕೊಟ್ಟಿದೆ ಎಂದು ಕಿಡಿಕಾರಿದರು.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಹಾಗೂ ಕಂದಾಯ ಸಚಿವ ಆರ್ ಅಶೋಕ್ ಅವರಿಗೆ ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯ ಬಗ್ಗೆ ಗೊತ್ತಿಲ್ಲ. ಅವರು ಕೇಂದ್ರ ಸರ್ಕಾರದ ಅಣತಿಯಂತೆ ವರ್ತಿಸುತ್ತಿದ್ದಾರೆ. ಕಾಯ್ದೆಯ ತಿದ್ದುಪಡಿಯು ರೈತರಿಗೆ ಮಾರಕವಾಗಿದೆಯೇ ಹೊರತು ಪೂರಕವಾದ ಯಾವುದೇ ಲಕ್ಷಣವಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.