ಮೈಸೂರು: ಕಬಿನಿ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಮಟೆ ಬಾರಿಸುವ ಮೂಲಕ ಎಚ್ಚರಿಕೆ ನೀಡಲಾಯಿತು.
ಕಬಿನಿ ಜಲಾಶಯದಿಂದ ಅತಿ ಹೆಚ್ಚು ನೀರನ್ನು ಹೊರಬಿಡಲಾಗುತ್ತಿದ್ದು, ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಸೂಚಿಸಲಾಗಿದೆ. ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿರುವುದರಿಂದ ನದಿ ದಂಡೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಸರಗೂರು ಮತ್ತು ನಂಜನಗೂಡಿನ ನದಿ ತೀರದ ಗ್ರಾಮಗಳಲ್ಲಿ ಸ್ಥಳೀಯ ಆಡಳಿತ ತಮಟೆ ಬಾರಿಸಿ ಜನರಲ್ಲಿ ಜಾಗೃತಿ ಮೂಡಿಸಿತು.
ಕಬಿನಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಗಂಜಿ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆದಿದೆ. ಸುರಕ್ಷತೆ ದೃಷ್ಟಿಯಿಂದ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಜೊತೆಗೆ ಉಕ್ಕಿ ಹರಿಯುತ್ತಿರುವ ನದಿ ಪ್ರದೇಶದಲ್ಲಿ ಯುವಕರು ಸೆಲ್ಫಿ ತೆಗೆದುಕೊಳ್ಳದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಎಚ್ಚರಿಸಿದ್ದಾರೆ.