ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ನಾಯಕರು ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಭಾಗವಹಿಸಿದ್ದು ವಿಶೇಷವಾಗಿತ್ತು.
ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ 69ನೇ ಹುಟ್ಟುಹಬ್ಬವನ್ನು ದೇಶಾದ್ಯಂತ ಆಚರಿಸಲಾಗುತ್ತಿದ್ದು, ಮೈಸೂರು ನಗರದ ವಿವಿಧ ಕಡೆ ಬಿಜೆಪಿ ನಾಯಕರು ಹಾಗೂ ಹಲವಾರು ಸಂಘ ಸಂಸ್ಥೆಗಳು ಸದಸ್ಯರು ವಿವಿಧ ರೀತಿಯಲ್ಲಿ ನಮೋ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಶಾಸಕರು ಇಂದು ಬೆಳ್ಳಂಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಅಲ್ಲಿ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ನಂತರ ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬಿಜೆಪಿ ನಾಯಕರ ಜೊತೆ ಮಾಜಿ ಸಚಿವ, ಹಾಲಿ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಪೂಜೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.