ಮೈಸೂರು: ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯ ಸರ್ಕಾರ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದರೆ ರಾಜ್ಯದಲ್ಲಿ ರೈತರು ಬೀದಿಗಿಳಿದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದರು.
ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ಕೃಷಿ ಉತ್ಪನ್ನ ಮಾರಾಟ (ನಿಯಂತ್ರಣ ಮತ್ತು ಅಭಿವೃದ್ಧಿ) ( ಎರಡನೇ ತಿದ್ದುಪಡಿ )ಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಇದರಿಂದ ರೈತರಿಗೆ ಭಾರಿ ಹೊಡೆತ ಬೀಳಲಿದೆ. ಈಗಾಗಲೇ ರೈತರ ಬೆಳೆಗಳಿಗೆ ಸೂಕ್ತ ಬೆಂಬಲ ಸಿಗುತ್ತಿಲ್ಲ. ಕಾರ್ಪೋರೇಟ್ ಕಂಪನಿಗಳ ಕೈ ಕೆಳಗೆ ಎಪಿಎಂಸಿ ಹೋದರೆ ರೈತರಿಗೆ ಭವಿಷ್ಯವೇ ಇರುವುದಿಲ್ಲವೆಂದು ಕಿಡಿಕಾರಿದರು.
ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಾರದಂತೆ ರೈತರು ನಡೆಸುವ ಹೋರಾಟಕ್ಕೆ ವಿರೋಧ ಪಕ್ಷಗಳು ಕೈಜೋಡಿಸಬೇಕು. ವಿಧಾನಸಭೆಯಲ್ಲಿ ಕುಳಿತು ಮಾತನಾಡಿದರೆ ಸಾಲದು. ನಮ್ಮೊಂದಿಗೆ ಬೀದಿಗಿಳಿದು ಸರ್ಕಾರಕ್ಕೆ ಎಚ್ಚರಿಕೆ ಕೊಡಬೇಕು. ಬಿ.ಎಸ್.ಯಡಿಯೂರಪ್ಪ ಅವರು ಮೊದಲಿನಂತೆ ಈಗ ಇಲ್ಲ. ಕೇಂದ್ರದ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ ಎಂದರು.
ಕೋವಿಡ್-19 ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಬರಗಾಲ ಹಾಗೂ ಪ್ರವಾಹದ ಸಂದರ್ಭದಲ್ಲೂ ಹೀಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರಲಿಲ್ಲ. ಕೊರೊನಾ ಕೇಂದ್ರ ಸರ್ಕಾರದ ಕಣ್ಣು ತೆರೆಸಿದೆ ಎಂದು ಹೇಳಿದರು.