ಮೈಸೂರು: ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ಅಕ್ರಮಗಳ ಕುರಿತು ತನಿಖೆ ನಡೆಸಲಾಗುವುದು. ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜ್ ಇಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಇಂದು ನಗರದ ಖಾಸಗಿ ಹೋಟೆಲ್ನಲ್ಲಿ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ಎರಡು ದಿನದ ಪ್ರಶಿಕ್ಷಣ ಶಿಬಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಹಿಂದಿನ ಕಾಂಗ್ರೆಸ್ ಅವಧಿಯಲ್ಲಿ ನಡೆದ ಅಕ್ರಮಗಳ ಕುರಿತು ತನಿಖೆ ನಡೆಸಲಾಗುವುದು. ತಪ್ಪಿತಸ್ಥರು ಯಾರೇ ಆದರೂ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಮ್ಮ ಸರ್ಕಾರದ ಅವಧಿಯಲ್ಲಿ ಪಿಎಸ್ಐ ನೇಮಕಾತಿ ಅಕ್ರಮ ಹೊರಬಂದ ಕೂಡಲೇ ನಾವು ತನಿಖೆಗೆ ಆದೇಶ ನೀಡಿದೆವು. ತನಿಖೆಯಲ್ಲಿ ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದ ಕಟೀಲ್, ಮಾತೆತ್ತಿದರೆ ಸಮಾಜವಾದಿ ಎನ್ನುವ ಸಿದ್ದರಾಮಯ್ಯ ತಮ್ಮ ಅವಧಿಯಲ್ಲಿ ನಡೆದ ಹಲವು ಪ್ರಕರಣಗಳಲ್ಲಿ ತನಿಖೆ ನಡೆಸುವ ನೈತಿಕತೆ ತೋರಿಲ್ಲ ಎಂದು ಆರೋಪಿಸಿದರು.
ಸಿದ್ದರಾಮಯ್ಯ ಅವಧಿಯಲ್ಲಿ ನಡೆದ ಹಗರಣಗಳನ್ನು ಬಿಚ್ಚಿಡುವ ಕೆಲಸವನ್ನು ನಾವು ಮಾಡುತ್ತೇವೆ ಎಂದು ಸಿದ್ದರಾಮಯ್ಯ ಟೀಕೆಗೆ ತಿರುಗೇಟು ನೀಡಿದರು. ಇದರ ಜೊತೆಗೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಜೊತೆಗೆ ಕರ್ನಾಟಕದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಸಹ ಜಾಮೀನಿನ ಮೇಲೆ ಇದ್ದಾರೆ ಎಂದು ಟೀಕಿಸಿದರು.
40 ಪರ್ಸೆಂಟ್ ಕಮಿಷನ್ಗೆ ದಾಖಲೆ ಇದ್ದರೆ ಬಿಡುಗಡೆ ಮಾಡಿ: ರಾಜ್ಯ ಸರ್ಕಾರ 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಟೀಕೆ ಮಾಡುವ ಸಿದ್ದರಾಮಯ್ಯ ಅವರೇ ನಿಮ್ಮ ಬಳಿ ದಾಖಲೆಗಳು ಇದ್ದರೆ ಬಿಡುಗಡೆ ಮಾಡಿ. ಆದರೆ, ಯಾವುದೇ ಸಾಕ್ಷ್ಯಾಧಾರಗಳು ಇಲ್ಲದೆ ಆರೋಪ ಮಾಡುವುದು ಸರಿಯಲ್ಲ. ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಕಾಂಗ್ರೆಸ್ ಏನು ಹೇಳುತ್ತಿದೆ. ಅನಂತರ ಏನಾಯಿತು ಎಂಬುದು ಎಲ್ಲರಿಗೂ ತಿಳಿದ ವಿಚಾರ ಎಂದರು.
ಇದನ್ನೂ ಓದಿ: ಮೊಟ್ಟೆ ಶಾಲಾ ಮಕ್ಕಳ ಬಿಸಿಯೂಟದಲ್ಲಿ ಕಾಂಗ್ರೆಸ್ನಿಂದ 80 ಪರ್ಸೆಂಟ್ ಕಮಿಷನ್: ನಳಿನ್ ಕುಮಾರ್ ತಿರುಗೇಟು