ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪೆದ್ದನ ರೀತಿ ಹೇಳಿಕೆ ಕೊಡುತ್ತಾರೆ. ಅವರಿಗೆ ಗಂಭೀರತೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ವ್ಯಂಗ್ಯವಾಡಿದರು.
ಜಲದರ್ಶಿನಿ ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಚಾಮರಾಜನಗರ ಜಿಲ್ಲೆಯಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಹೇಳಿಕೆ ಕೊಡುತ್ತಾರೆ. ಆದರೆ ಅವರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇದ್ಯಾ ಎಂದು ಪ್ರಶ್ನಿಸಿದರು.
ಪಕ್ಷದ ರಾಜ್ಯಾಧ್ಯಕ್ಷರಾಗಿ ಗಂಭೀರವಾಗಿ ನಡೆದುಕೊಳ್ಳುತ್ತಿಲ್ಲ. ಅನುಭವದ ಕೊರತೆಯಿದೆ. ಯತ್ನಾಳ್ ಸಿಎಂ ವಿರುದ್ಧ ಹಗುರವಾಗಿ ಮಾತನಾಡಿದರೂ, ಪರೋಕ್ಷವಾಗಿ ಬೆಂಬಲ ನೀಡುತ್ತ ಕುಮ್ಮಕ್ಕು ನೀಡುತ್ತಿದ್ದಾರೆ. ವಿರೋಧ ಪಕ್ಷದ ಸ್ಥಾನವನ್ನು ಬಿಜೆಪಿಯವರೇ ನಿರ್ವಹಣೆ ಮಾಡುತ್ತಿದ್ದಾರೆ ಎಂದು ಕುಟುಕಿದರು.
ಜೆಡಿಎಸ್ ಪಕ್ಷ ಅವಕಾಶವಾದಿ. ಕಾಂಗ್ರೆಸ್ ಪಕ್ಷ ಕುಮಾರಸ್ವಾಮಿ ಅವರಿಗೆ ಸಿಎಂ ಮಾಡುವ ಮೂಲಕ ಸುವರ್ಣಾವಕಾಶ ನೀಡಿತ್ತು. ಆದರೆ ಅದನ್ನು ಸದುಪಯೋಗ ಮಾಡಿಕೊಳ್ಳದೆ ಮಾತನಾಡುತ್ತಾರೆ. ಹೆಚ್.ಡಿ.ದೇವೇಗೌಡರಿಗೆ ರಾಜ್ಯಸಭೆಗೆ ಕಾಂಗ್ರೆಸ್ ಸಹಾಯ ಮಾಡಿದೆ. ರಾಜ್ಯ ಸರ್ಕಾರ ಎಸ್ಸಿಎಸ್ಪಿ, ಟಿಎಸ್ಪಿ ಅನುದಾನ ಬಳಕೆಯಲ್ಲಿ ವಂಚನೆ ಮಾಡಿದೆ ಎಂದು ಕಿಡಿಕಾರಿದರು.