ಮೈಸೂರು: ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿ ನಂತರ ದೇವಾಲಯದ ಮುಂಭಾಗದಲ್ಲಿ ಕೇಕ್ ಕತ್ತರಿಸಿ ತಮ್ಮ 70ನೇ ವರ್ಷದ ಹುಟ್ಟುಹಬ್ಬವನ್ನು ಮಾಜಿ ಸಚಿವ ಜಿ ಟಿ ದೇವೇಗೌಡ ಆಚರಿಸಿಕೊಂಡಿದ್ದಾರೆ.
ಮುಂದಿನ ರಾಜಕೀಯ ಜೀವನದ ಬಗ್ಗೆ ಗೊಂದಲದ ಹಾದಿಯಲ್ಲಿ ಇರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡರು ಬೆಳಗ್ಗೆ ತಮ್ಮ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿ, ನಂತರ ನಾಡ ಅಧಿದೇವತೆ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿ ದೇವಾಲಯದ ಮುಂಭಾಗದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು. ನಂತರ ಉತ್ತನಹಳ್ಳಿ ಹಾಗೂ ನಂಜನಗೂಡಿನ ಶ್ರೀಕಂಠೇಶ್ವರನಿಗೆ ಕುಟುಂಬ ಸಮೇತರಾಗಿ ಹೋಗಿ ಪೂಜೆ ಸಲ್ಲಿಸಿದರು.
ಈಗಾಗಲೇ ಹುಣಸೂರು ಉಪಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬೆಂಬಲ ನೀಡದೆ ತಟಸ್ಥರಾಗಿರುವುದಾಗಿ ಹೇಳಿದ್ದಾರೆ. ಈ ಮಧ್ಯೆ ಹಲವು ಪಕ್ಷದ ನಾಯಕರು ಬೆಂಬಲ ಪಡೆಯಲು ಕಸರತ್ತು ನಡೆಸಿದ್ದಾರೆ.