ಮೈಸೂರು: ಸರ್ಕಾರ ಅನ್ನಭಾಗ್ಯ ಯೋಜನೆಯಡಿ ನೀಡುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಶಾಂತಿನಗರ ನಿವಾಸಿ ಸೈಯದ್ ಅಹಮದ್ (32) ಬಂಧಿತ ಆರೋಪಿ. ಈತ ಸರ್ಕಾರದ ಪಡಿತರ ಚೀಟಿ ಹೊಂದಿರುವವರಿಗೆ ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದರ ಬಗ್ಗೆ ಸಿಸಿಬಿ ಪೊಲೀಸರು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದರು.
ಬಂಧಿತನಿಂದ 22.28 ಕ್ವಿಂಟಾಲ್ ಕೆ.ಜಿ. ಅಕ್ಕಿ ಹಾಗೂ ಅಕ್ಕಿ ಸಾಗಣೆಗೆ ಬಳಸಿದ್ದ ವಾಹನವನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.