ಮೈಸೂರು: "ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಅಪ್ರಸ್ತುತವಾಗಿದ್ದು, ಈಗ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ಸರ್ಕಾರ ಸುಭದ್ರವಾಗಿದೆ. ಸರ್ಕಾರಕ್ಕೆ ಯಾವುದೇ ಅಪಾಯ ಇಲ್ಲ" ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ ಹೆಚ್ ಮುನಿಯಪ್ಪ ಹೇಳಿದರು. ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಸಭಾಂಗಣದಲ್ಲಿ ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯ ಕಾರ್ಯಕ್ರಮ ಉದ್ಘಾಟನೆ ಮಾಡಿ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
"ರಾಜ್ಯದ ಅಯಾ ಭಾಗದ ಜನರ ಆಹಾರ ಪದ್ಧತಿಗೆ ಅನುಗುಣವಾಗಿ ಪಡಿತರ ವಿತರಣೆ ಮಾಡಲಾಗುವುದು. ಕೆಲವು ಜಿಲ್ಲೆಗಳಲ್ಲಿ ಅಕ್ಕಿ ಜೊತೆ ರಾಗಿ ವಿತರಣೆ ಮಾಡಿದರೆ, ಕೆಲವು ಕಡೆ ಅಕ್ಕಿ ಜೊತೆ ಜೋಳ ವಿತರಣೆ ಮಾಡಲಾಗುವುದು. 10 ಕೆಜಿ ಅಕ್ಕಿ ವಿತರಣೆ ಮಾಡುವ ಗುರಿ ಇದೆ. ಆದರೆ, ಕೇಂದ್ರ ಹೆಚ್ಚುವರಿ ಅಕ್ಕಿಯನ್ನು ನೀಡುತ್ತಿಲ್ಲ. ಹಾಗಾಗಿ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡುತ್ತಿದ್ದೇವೆ. ಶೀಘ್ರವೇ ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸ್ಗಢ ರಾಜ್ಯಗಳಿಂದ ಅಕ್ಕಿ ಪಡೆದು ವಿತರಣೆ ಮಾಡಲಾಗುವುದು" ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
"ಒಂದು ರಾಷ್ಟ್ರ ಒಂದು ಪಡಿತರ ಯೋಜನೆಯಿಂದ ರಾಜ್ಯದಲ್ಲಿರುವ 10 ಸಾವಿರ ಕಾರ್ಡುದಾರರಿಗೆ ಅಕ್ಕಿ ವಿತರಣೆ ಮಾಡಬೇಕಾಗಿದ್ದು, ಬಿಪಿಎಲ್ ಕಾರ್ಡುದಾರರು ತಮ್ಮ ಸುತ್ತಮುತ್ತಲಿನ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ ತೆಗೆದುಕೊಳ್ಳಬಹುದು. ನಮ್ಮ ರಾಜ್ಯದಲ್ಲಿ ನಾಲ್ಕು ಕೋಟಿ ಕಾರ್ಡುದಾರರಿಗೆ ಪಡಿತರ ವಿತರಣೆ ಮಾಡುತ್ತಿದ್ದೇವೆ. 40 ಲಕ್ಷ ಕಾರ್ಡುದಾರರಿಗೆ ಪಡಿತರ ಸಿಗುತ್ತಿಲ್ಲ, ಉಳಿದ 40 ಲಕ್ಷ ಕಾರ್ಡುದಾರರಿಗೂ ಪಡಿತರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೇವೆ" ಎಂದು ಹೇಳಿದರು.
ನ್ಯಾಯಬೆಲೆ ಅಂಗಡಿ ಮಾಲೀಕರ ಸಮಸ್ಯೆ ಬಗೆಹರಿಸಿ: ಒಂದು ರಾಷ್ಟ್ರ, ಒಂದು ಪಡಿತರ ಚೀಟಿ ಕಾರ್ಯಕ್ರಮ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಕಾರ್ಯಕ್ರಮದ ಮಧ್ಯೆ ನ್ಯಾಯಬೆಲೆ ಅಂಗಡಿ ಮಾಲೀಕರು ತಮ್ಮ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಚಿವರು ಅವರನ್ನು ಸಮಾಧಾನ ಪಡಿಸಿದರು. ಕಾರ್ಯಕ್ರಮದ ನಡುವೆ ಮಹಿಳೆಯೊಬ್ಬರು 5 ಕೆಜಿ ಅಕ್ಕಿ ಬದಲು ಹಣ ನೀಡುತ್ತಿರುವುದು ಸರಿಯಲ್ಲ, ಹಣದ ಬದಲು ಅಕ್ಕಿ ನೀಡಿ ಎಂದು ಆಗ್ರಹಿಸಿದರು, ಅದಕ್ಕೆ ಸಚಿವರು ಶೀಘ್ರವೇ 10 ಕೆಜಿ ಅಕ್ಕಿ ನೀಡುವುದಾಗಿ ಮಹಿಳೆಗೆ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ರೈತರೊಬ್ಬರು ರಾಜ್ಯದಲ್ಲಿ ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ಕಳಪೆ ಗುಣಮಟ್ಟದ ಅಕ್ಕಿ ನೀಡಲಾಗುತ್ತಿದೆ ಎಂದು ಆರೋಪಿಸಿದರು. ಇದಕ್ಕೆ ಸಚಿವರು ಬಡವರಿಗೆ ನೀಡುವ ಅಕ್ಕಿ ಕಳಪೆ ಮಟ್ಟದಿಂದ ಕೂಡಿದೆ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: ನ.10 ರಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ; ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ