ಮೈಸೂರು: ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮಾಡಿ ಕಾಲಹರಣ ಮಾಡಬಾರದು ಗ್ರಾಮೀಣ ಭಾಗಕ್ಕೆ ಹೋಗಬೇಕು ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆ ಸರಿಯಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ ನೀಡಿದ್ದಾರೆ.
ಇಂದು ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಜೊತೆ ಮಾತುಕತೆ ನಡೆಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ್ರು. ಮೈಸೂರು ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಗ್ರಾಮಾಂತರ ಪ್ರದೇಶದಲ್ಲಿ ಸ್ಥಳೀಯ ಶಾಸಕರ ಜೊತೆ ಮಾತುಕತೆ ನಡೆಸಿ ಬಿಗಿಯಾದ ಲಾಕ್ಡೌನ್ ನಿಯಮವನ್ನು ಆಯಾ ಕ್ಷೇತ್ರದಲ್ಲಿ ಜಾರಿಗೆ ತರಲು ನಿರ್ಧರಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳು ಶಾಸಕರು ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದ್ರು.
ನಂಜನಗೂಡಿನ ಕೆಲವೊಂದು ಗ್ರಾಮಗಳಲ್ಲಿ ಜನರೇ ಸ್ವಯಂ ಪ್ರೇರಿತರಾಗಿ ಲಾಕ್ಡೌನ್ ಮಾಡಿಕೊಂಡಿದ್ದಾರೆ. ಅದೇ ರೀತಿ ಎಲ್ಲಾ ಗ್ರಾಮಗಳಲ್ಲೂ ನಿಯಮ ಪಾಲನೆ ಮಾಡಬೇಕು ಎಂಬುದು ನನ್ನ ಸಲಹೆ. ಮುಂದಿನ ವಾರದಿಂದ ಜಿಲ್ಲಾಧಿಕಾರಿಗಳು ಆಯಾ ಕ್ಷೇತ್ರದ ಶಾಸಕರ ಜೊತೆಗೂಡಿ ಒಂದೊಂದು ಹಳ್ಳಿಗೆ ಹೋಗಿ ಸಮಸ್ಯೆ ಬಗೆಹರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.