ಮೈಸೂರು: ಸರ್ಕಾರಿ ವೈದ್ಯರು ಖಾಸಗಿಯಾಗಿ ಪ್ರಾಕ್ಟೀಸ್ ಮಾಡುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬಂದಿವೆ. ಇದರ ಕಡಿವಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮೈಸೂರಿನಲ್ಲಿ ಹೇಳಿದ್ದಾರೆ.
ಬೈಯೋಮೆಟ್ರಿಕ್ ಹಾಜರಾತಿ ಕಡ್ಡಾಯ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ವಿಭಾಗದಲ್ಲಿ 6 ವೈದ್ಯಕೀಯ ಕಾಲೇಜುಗಳಿವೆ. ಈ ವ್ಯಾಪ್ತಿಯಲ್ಲಿ ವೈದ್ಯರು ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಬರುತ್ತಿಲ್ಲ. ಇದೇ ಸಮಯದಲ್ಲಿ ಬೇರೆ ಕಡೆ ಸೇವೆ ಸಲ್ಲಿಸುತ್ತಿದ್ದಾರೆ ಎಂಬ ದೂರುಗಳಿವೆ. ಮುಖ್ಯವಾಗಿ, ಸರ್ಕಾರಿ ವೈದ್ಯರು ಬೇರೆ ಕಡೆ ಅಂದರೆ ಕ್ಲಿನಿಕ್ನಲ್ಲಿ ವೈದ್ಯ ವೃತ್ತಿ ಮಾಡುತ್ತಿರುವ ಕುರಿತು ದೂರುಗಳು ಬಂದಿವೆ. ಹಾಗಾಗಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಲಾಗುತ್ತಿದೆ.
ಇದರೊಂದಿಗೆ ಜಿಪಿಎಸ್ ತಂತ್ರಜ್ಞಾನ ಅಳವಡಿಕೆ ಕುರಿತು ಚರ್ಚಿಸಲಾಗಿದ್ದು, ಸರ್ಕಾರಿ ವೈದ್ಯರು ಖಾಸಗಿಯಾಗಿ ಪ್ರಾಕ್ಟೀಸ್ ಮಾಡುವುದಕ್ಕೆ ಸಂಪೂರ್ಣ ಕಡಿವಾಣ ಹಾಕಲಾಗುವುದು. ಸರ್ಕಾರಿ ಆಸ್ಪತ್ರೆಗಳ ವೈದ್ಯರು ಬಡ ರೋಗಿಗಳ ಸೇವೆ ಮಾಡಬೇಕು. ಸರ್ಕಾರಿ ವೈದ್ಯರು ತಮ್ಮ ಕೆಲಸದ ಅವಧಿ ಮುಗಿದ ನಂತರ ಬೇಕಾದರೆ ಖಾಸಗಿಯಾಗಿ ಪ್ರಾಕ್ಟೀಸ್ ಮಾಡಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ನಮ್ಮ ಕ್ಲಿನಿಕ್ ಪ್ರಾರಂಭ: 2030 ರ ವೇಳೆಗೆ ಕ್ಷಯ ರೋಗ ಮುಕ್ತ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ನಮ್ಮ ಕರ್ನಾಟಕ 2025 ಒಳಗೆ ಕ್ಷಯ ರೋಗ ಮುಕ್ತ ಮಾಡಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯ ಸರ್ಕಾರದ ವತಿಯಿಂದ ರಾಜ್ಯಾದ್ಯಂತ 438 ನಮ್ಮ ಕ್ಲಿನಿಕ್ ಸ್ಥಾಪನೆಗೆ ಮುಂದಾಗಿದ್ದು, ಬಡ ಹಾಗೂ ಮಧ್ಯಮ ವರ್ಗದ ಜನರು ವಾಸಿಸುವ ಪ್ರದೇಶಗಳಲ್ಲಿ ನಮ್ಮ ಕ್ಲಿನಿಕ್ ಅನ್ನು ನವೆಂಬರ್ 8ರೊಳಗೆ ಪ್ರಾರಂಭಿಸಲಾಗುವುದು ಎಂದರು.
ಇದನ್ನೂ ಓದಿ: ಡಿಕೆಶಿ, ಸಿದ್ದರಾಮಯ್ಯ ಯಾವಾಗ್ಲೂ ನಾನೊಂದು ತೀರ ನೀನೊಂದು ತೀರ: ಸಚಿವ ಸುಧಾಕರ್
128 ಮಹಿಳಾ ಸ್ವಾಸ್ಥ್ಯ ಕೇಂದ್ರಗಳನ್ನು ರಾಜ್ಯದ ವಿವಿಧೆಡೆ ಸ್ಥಾಪಿಸಲಾಗುವುದು. ರಾಜ್ಯದಲ್ಲಿ ತಜ್ಞ ವೈದ್ಯರ ಕೊರತೆ ಹೆಚ್ಚಾಗಿದೆ. ಇದನ್ನು ನೀಗಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಮೈಸೂರಿನಲ್ಲಿ ಅತ್ಯಾಧುನಿಕ ಕ್ಯಾನ್ಸರ್ ಆಸ್ಪತ್ರೆ ಸ್ಥಾಪಿಸಲು 101 ಕೋಟಿ ಅವಶ್ಯಕತೆ ಇದೆ. ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮೊದಲ ಹಂತದಲ್ಲಿ 50 ಕೋಟಿ ರೂ ಬಿಡುಗಡೆ ಮಾಡುತ್ತೇವೆ. ನಂತರ ಸುಸಜ್ಜಿತವಾದ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಕೆಲಸ ಆರಂಭಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಚಿವ ಡಾ. ಕೆ ಸುಧಾಕರ್ ಮಾಹಿತಿ ನೀಡಿದರು.