ಮೈಸೂರು: ಚಾಮರಾಜನಗರ ಘಟನೆಯನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿರುವುದನ್ನು ಸ್ವಾಗತ ಮಾಡುತ್ತೇನೆ. ಮೈಸೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ವಾರ್ ರೂಂಗೆ ಕೆಎಎಸ್ ಅಧಿಕಾರಿಯನ್ನು ನೇಮಕ ಮಾಡಬೇಕೆಂದು ಮನವಿ ಮಾಡಿದ್ದಾಗಿ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಇಂದು ಉಸ್ತುವಾರಿ ಸಚಿವರ ಸಭೆಯಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ, ಚಾಮರಾಜನಗರ ಘಟನೆ ದುರದೃಷ್ಟಕರ. ಇದನ್ನು ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಿರುವುದನ್ನು ಸ್ವಾಗತಿಸುತ್ತೇನೆ.
ಜನರಿಗೆ ಸರಿಯಾಗಿ ಬೆಡ್ ಸಿಗದೆ, ವೆಂಟಿಲೇಟರ್ ಸಿಗದೆ, ಆಕ್ಸಿಜನ್ ಸಿಗದೆ ಪರದಾಡುತ್ತಿದ್ದು, ಇದನ್ನು ಸರಿಪಡಿಸಬೇಕೆಂದು ಉಸ್ತುವಾರಿ ಸಚಿವರ ಸಭೆಯಲ್ಲಿ ಕೇಳಿದ್ದೇನೆ. ಜೊತೆಗೆ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಅಂತ್ಯಕ್ರಿಯೆಗೆ ಕುಟುಂಬದವರಿಗೆ ಮೃತದೇಹವನ್ನು ಕೊಡದಂತೆ, ಈ ಮೃತದೇಹಗಳ ಅಂತ್ಯಕ್ರಿಯೆಗೆ ಒಂದು ತಂಡವನ್ನು ರಚಿಸಬೇಕೆಂದು ಸಲಹೆ ನೀಡಿದ್ದೇನೆ.
ನನ್ನ ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಕೊರೊನಾ ಬಗ್ಗೆ ಅರಿವು ಮೂಡಿಸುವ ಕೆಲಸದ ಜೊತೆಗೆ ಲಸಿಕೆಯನ್ನು ಸಹ ಹಾಕಿಸಿಕೊಳ್ಳಿ ಎಂದು ಮನವಿ ಮಾಡಲಾಗಿದ್ದು, ಸಾಧ್ಯವಾದಷ್ಟು ಗ್ರಾಮಾಂತರ ಪ್ರದೇಶದಲ್ಲಿ ಈ ಸೋಂಕು ಹರಡದಂತೆ ಗ್ರಾಮೀಣ ಜನರಿಗೆ ತಿಳುವಳಿಕೆ ನೀಡಲು ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.