ಮೈಸೂರು: ಮೈಸೂರಿನ ಕಾಂಗ್ರೆಸ್ ಶಾಸಕನಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ನಗರದ 150ಕ್ಕೂ ಹೆಚ್ಚು ಕಾಂಗ್ರೆಸ್ ಸದಸ್ಯರು ರಾಜೀನಾಮೆ ಸಲ್ಲಿಸಿದ್ದಾರೆ.
ಸಚಿವ ಸಂಪುಟ ರಚನೆಯಾಗಿ ಐದು ದಿನ ಕಳೆದಿಲ್ಲ ಆಗಲೇ ಮೈಸೂರು ನಗರದ ನರಸಿಂಹರಾಜ, ಚಾಮರಾಜ ಹಾಗೂ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ 6 ಮಂದಿ ಬ್ಲಾಕ್ ಅಧ್ಯಕ್ಷರು, 23 ವಾರ್ಡ್‌ಗಳ ಅಧ್ಯಕ್ಷ-ಉಪಾಧ್ಯಕ್ಷ ಹಾಗೂ ಕಾರ್ಯಕರ್ತರು ಸೇರಿದಂತೆ ಒಟ್ಟು 150 ಮಂದಿ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿದ ಮೈಸೂರಿನ ಕಾಂಗ್ರೆಸ್ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದರು. ಅಂದು ಭರವಸೆ ನೀಡಿದ ಈ ಇಬ್ಬರು ನಾಯಕರು ಈಗ ಕ್ಯಾರೆ ಎನ್ನುತ್ತಿಲ್ಲ ಎನ್ನಲಾಗಿದ್ದು, ಇದರಿಂದ ಬೇಸರಗೊಂಡಿರುವ ಮುಖಂಡರು ರಾಜೀನಾಮೆ ಸಲ್ಲಿಸಿದ್ದಾರೆ.
ಈ ನಡುವೆ ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ಹಿಂಪಡೆಯುವಂತೆ ಸಲಹೆ ನೀಡಿದ್ದು, ಸಚಿವ ಸ್ಥಾನ ನೀಡಲಿಲ್ಲವೆಂದರೆ ರಾಜೀನಾಮೆ ಅಂಗೀಕರಿಸಿ ಎಂದು ಮುಖಂಡರು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.