ಮೈಸೂರು: ನಂಜನಗೂಡು ತಾಲೂಕಿನ ಹುಚ್ಚಗಣಿ ಗ್ರಾಮದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಹಿನ್ನೆಲೆ ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಭೇಟಿ ನೀಡಿದ್ದಾರೆ.
ಘಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ವರಿಷ್ಠಾಧಿಕಾರಿ, 2 ಗುಂಪುಗಳ ನಡುವೆ ಜಗಳ ನಡೆದು ಉದಯರವಿ ಎಂಬಾತನಿಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಈ ಹಿಂದೆ ಕೂಡ ಗಲಾಟೆಯಾಗಿತ್ತು ಎಂಬ ಮಾಹಿತಿ ಇದೆ. ಈ ಘಟನೆಯ ಬಗ್ಗೆ ತನಿಖೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಏನಿದು ಗಲಾಟೆ
ಗ್ರಾಮದ ಮಹದೇವಮ್ಮ ದೇವಸ್ಥಾನ ನಿರ್ವಹಣೆ ಸಮಿತಿ ರಚನೆ ಮಾಡುವ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತ ರವಿ, ಬಿಜೆಪಿ ಕಾರ್ಯಕರ್ತ ಉದಯರವಿ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆ ಮಾಡಿದ್ದರಿಂದ, ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಶಾಂತಗೊಳಿಸಿದ್ದಾರೆ.
ಇದನ್ನೂ ಓದಿ: ದೇವಾಲಯ ತೆರವು ವಿವಾದ : ಹುಚ್ಚಗಣಿ ಗ್ರಾಮದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾರಾಮಾರಿ