ಮೈಸೂರು: 2018ರಲ್ಲಿ ಮುಖ್ಯಮಂತ್ರಿ ಆಗಿದ್ದ ವೇಳೆ ಸಿದ್ದರಾಮಯ್ಯ ಮೈಸೂರಿನ ಸಿದ್ಧಾರ್ಥ ನಗರದಲ್ಲಿ ಹೊಸದಾಗಿ ಕಟ್ಟಿಸಿದ್ದ ಜಿಲ್ಲಾಧಿಕಾರಿ ಕಚೇರಿ ಉದ್ಘಾಟಿಸಿದ್ದರು. 2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿ ಮೌಖಿಕ ಆದೇಶ ನೀಡಿದ್ದು, ಇಂದಿನಿಂದ ಹೊಸ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಕಾರ್ಯನಿರ್ವಹಿಸುತ್ತಿದ್ದಾರೆ. ಐದು ವರ್ಷದ ನಂತರ ಹಳೇ ಡಿಸಿ ಕಚೇರಿಯಿಂದ ಹೊಸ ಕಟ್ಟಡಕ್ಕೆ ಡಿಸಿ ಕಚೇರಿ ಸ್ಥಳಾಂತರ ಮಾಡಲಾಗಿದೆ.
ನಗರದ ಹೃದಯ ಭಾಗದಲ್ಲಿದ್ದ ಪಾರಂಪರಿಕ ಜಿಲ್ಲಾಧಿಕಾರಿಗಳ ಹಳೆಯ ಕಚೇರಿಯನ್ನು ಗುರುವಾರ ಸಿದ್ದಾರ್ಥ ನಗರದ ಹೊಸ ಜಿಲ್ಲಾಧಿಕಾರಿ ಕಚೇರಿಗೆ ಸ್ಥಳಾಂತರಿಸಲಾಗಿದೆ. ಹೀಗಾಗಿ ಇಂದು ಹಳೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸಾಮಗ್ರಿ, ಕಡತಗಳು ಸೇರಿದಂತೆ ಎಲ್ಲ ವಸ್ತುಗಳನ್ನು ಸ್ಥಳಾಂತರ ಮಾಡುವ ಕಾರ್ಯಾರಂಭವಾಗಿದೆ.
2018ರಲ್ಲಿ ಉದ್ಘಾಟನೆಗೊಂಡಿದ್ದ ಡಿಸಿ ಕಚೇರಿ: ಸಿದ್ದರಾಮಯ್ಯ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ 2016ರಲ್ಲಿ ಈ ಹೊಸ ಜಿಲ್ಲಾಧಿಕಾರಿ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ್ದರು. ಆಗ ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವರಾಗಿದ್ದ ಮಹದೇವಪ್ಪ 2018ರ ಆರಂಭದಲ್ಲಿ ಹೊಸ ಡಿಸಿ ಕಟ್ಟಡ ಪೂರ್ಣಗೊಳಿಸಿದ್ದರು. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ 2018 ರ ಮಾರ್ಚ್ ನಲ್ಲಿ ಹೊಸ ಡಿಸಿ ಕಚೇರಿ ಉದ್ಘಾಟಿಸಿದ್ದರು.
ಆ ನಂತರ ಹೊಸ ಸರ್ಕಾರ ಬಂತು. ಬಿಜೆಪಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಉಸ್ತುವಾರಿ ಸಚಿವರಾಗಿದ್ದ ಎಸ್.ಟಿ.ಸೋಮಶೇಖರ್ ತಮ್ಮ ಕಚೇರಿಯನ್ನು ಅಲ್ಲೇ ತೆರೆದಿದ್ದನ್ನು ಬಿಟ್ಟರೆ, ಸಂಪೂರ್ಣವಾಗಿ ಜಿಲ್ಲಾಧಿಕಾರಿ ಕಚೇರಿಯನ್ನು ಈ ಹೊಸ ಕಟ್ಟಡಕ್ಕೆ ಸ್ಥಳಾಂತರ ಮಾಡಿರಲಿಲ್ಲ. ಈಗ ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವುದರಿಂದ ಸಿದ್ದಾರ್ಥನಗರದ ಹೊಸ ಕಟ್ಟಡಕ್ಕೆ ಜಿಲ್ಲಾಧಿಕಾರಿ ಕಚೇರಿಯನ್ನು ಸ್ಥಳಾಂತರ ಮಾಡಲಾಗಿದೆ. ಸುಮಾರು 84.66 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಹೊಸ ಡಿಸಿ ಕಚೇರಿಯಲ್ಲಿ ಭೂದಾಖಲೆ ಉಪ ನಿರ್ದೇಶಕರ ಕಚೇರಿ, ಜಿಲ್ಲಾ ನಗರ ಅಭಿವೃದ್ಧಿ ಕೋಶ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ, ಮುಜರಾಯಿ ಇಲಾಖೆಯ ತಹಸೀಲ್ದಾರರ ಕಚೇರಿ ಸೇರಿದಂತೆ ಹಲವು ಕಚೇರಿಗಳನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಉಳಿದ ಕಚೇರಿಗಳನ್ನು ಹೊಸ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಳಾವಕಾಶ ನೋಡಿಕೊಂಡು ಸ್ಥಳಾಂತರ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಡಳಿತ ಹೇಳಿದೆ.
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಈ ಹೊಸ ಕಟ್ಟಡವನ್ನು ಉಪಯೋಗಿಸಲಾಗಿದ್ದು, ಮುಂದಿನ ದಿನಗಳಲ್ಲಿ ಹೊಸ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಳಾವಕಾಶ ನೋಡಿಕೊಂಡು ಹಲವು ಇಲಾಖೆಗಳನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆ ಮಾಡಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಕೆ ವಿ. ರಾಜೇಂದ್ರ ತಿಳಿಸಿದ್ದಾರೆ.
ವಸ್ತು ಸಂಗ್ರಹಾಲಯ ಆಗಲಿದೆಯೇ ಹಳೆಯ ಜಿಲ್ಲಾಧಿಕಾರಿ ಕಚೇರಿ?: ನಗರದ ಹೃದಯ ಭಾಗದಲ್ಲಿ ಇರುವ ಹಳೆಯ ಪಾರಂಪರಿಕ ಜಿಲ್ಲಾಧಿಕಾರಿ ಕಚೇರಿಯನ್ನು ಈಗ ಕಂದಾಯ ವಸ್ತು ಸಂಗ್ರಹಾಲಯ ಮಾಡಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮೈಸೂರು ಪ್ರಾಂತ್ಯ ಇತಿಹಾಸದಲ್ಲಿ ಉತ್ತಮ ಆಡಳಿತಕ್ಕೆ ಹೆಸರಾಗಿದೆ. ಅದನ್ನು ಬಿಂಬಿಸುವ ಸಲುವಾಗಿ ಕಂದಾಯ ಇಲಾಖೆ ದಾಖಲೆಗಳನ್ನು ಒಳಗೊಂಡ ವಸ್ತು ಸಂಗ್ರಹಾಲಯವನ್ನು ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾಹಿತಿ ನೀಡಿದರು.