ಮೈಸೂರು : ಸಾವಿರ ಜನಕ್ಕೆ ಸೀಮಿತಗೊಳಿಸಿ, ಸರಳವಾಗಿ ಪಂಚಲಿಂಗ ದರ್ಶನ ಮಹೋತ್ಸವ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಿರ್ಧರಿಸಿದ್ದಾರೆ.
ಇಂದು ತಿ.ನರಸೀಪುರ ತಾಲೂಕಿನ ತಲಕಾಡಿನಲ್ಲಿ ಪಂಚಲಿಂಗ ಮಹೋತ್ಸವದ ಕುರಿತು ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಸಿಎಂ, ಪಂಚಲಿಂಗ ದರ್ಶನದ ಹಿನ್ನೆಲೆಯಲ್ಲಿ ಅಗತ್ಯವಿರುವ ಕೆಲಸಗಳನ್ನು ತುರ್ತಾಗಿ ಕೈಗೊಳ್ಳಬೇಕು. ತಲಕಾಡು ಅಭಿವೃದ್ಧಿಗೆ ಬೇಕಾಗುವ ಶಾಶ್ವತ ಕೆಲಸಗಳನ್ನು ನಂತರ ಕೈಗೆತ್ತುಕೊಳ್ಳಿ. ಈಗ ತರಾತುರಿಯಲ್ಲಿ ಮಾಡುವುದು ಬೇಡ. ಈ ಬಾರಿಯ ಮಹೋತ್ಸವದಲ್ಲಿ ಕೇವಲ ಸಾವಿರ ಜನಕ್ಕೆ ಮಾತ್ರ ದರ್ಶನ ಮಾಡಲು ಅವಕಾಶ ಮಾಡಲಾಗಿದೆ ಎಂದು ಹೇಳಿದರು.
ಬಳಿಕ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಮಾತನಾಡಿ, ರಸ್ತೆ ಗುಂಡಿ ಮುಚ್ಚುವ ಕೆಲಸ ನಾಳೆಯಿಂದಲೇ ಕೈಗೊಳ್ಳಲಾಗುತ್ತದೆ. ಈ ಕೆಲಸವನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ತ್ವರಿತಗತಿಯಲ್ಲಿ ಪೂರ್ಣಗೊಳಿಸಲಿದ್ದಾರೆ ಎಂದು ತಿಳಿಸಿದರು.
ನಂತರ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಾತನಾಡಿ, ಪಂಚಲಿಂಗ ದರ್ಶನ ಮಹೋತ್ಸವಕ್ಕೆ 2.2 ಕೋಟಿ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಜಿಲ್ಲಾಡಳಿತ ಸರ್ಕಾರಕ್ಕೆ ಸಲ್ಲಿಸಿದೆ. ಈ ವೆಚ್ಚವನ್ನು ಮರುಪರಿಶೀಲಿಸಿ ಸಲ್ಲಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು.
ಸಭೆಯಲ್ಲಿ ಮುಜರಾಯಿ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಎಸ್.ಎ.ರಾಮದಾಸ್, ಎಂ.ಅಶ್ವಿನ್ ಕುಮಾರ್, ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ. ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಒ ಡಿ.ಭಾರತಿ, ಪ್ರಾದೇಶಿಕ ಆಯುಕ್ತರಾದ ಪ್ರಕಾಶ್ ಇನ್ನಿತರರು ಇದ್ದರು.