ಮೈಸೂರು: ಜಿಲ್ಲಾ ವ್ಯಾಪ್ತಿಯಲ್ಲಿ ಹೊರ ರಾಜ್ಯದ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್.ಜಿ. ಶಂಕರ್ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ವ್ಯಾಪ್ತಿಯಲ್ಲಿ ಬೇರೆ ರಾಜ್ಯಗಳಿಂದ ಪ್ಲಾಸ್ಟಿಕ್ ಹಾಗೂ ಇತರೆ ತ್ಯಾಜ್ಯಗಳನ್ನು ಲಾರಿ ಮೂಲಕ ಸಾಗಿಸಲಾಗುತ್ತಿತ್ತು. ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯವನ್ನು ವಿಲೇವಾರಿ ಮಾಡುತ್ತಿರುವುದು ಹಾಗೂ ಆಲೆ ಮನೆಗಳಲ್ಲಿ ತ್ಯಾಜ್ಯವನ್ನು ಬಳಸಿ ಸುಡಲಾಗುತ್ತಿತ್ತು. ಇದರಿಂದ ಸಾರ್ವಜನಿಕರ ಆರೋಗ್ಯಕ್ಕೆ ತೀವ್ರ ಹಾನಿಯುಂಟಾಗುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರು, ಇತರೆ ರಾಜ್ಯದ ತ್ಯಾಜ್ಯವನ್ನು ಜಿಲ್ಲೆಯಲ್ಲಿ ವಿಲೇವಾರಿ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188ರ ಪ್ರಕಾರ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.