ಮೈಸೂರು: ಹುಣಸೂರು ಉಪಚುನಾವಣೆ ಮತದಾನದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಹಾಗೂ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್ ಅವರಿಗೆ ರಾಜ್ಯ ಉಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಡಿಸೆಂಬರ್ 5ರಂದು ನಡೆದ ಉಪ ಚುನಾವಣೆಯ ಮತದಾನದ ವೇಳೆ ರಾಮನಹಳ್ಳಿಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಿದ್ದರು. ಈ ಕಾರಣಕ್ಕೆ ಪೊಲೀಸರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್ ಅವರನ್ನು 1ನೇ ಆರೋಪಿಯಾಗಿ ಮತ್ತು ಶಾಸಕ ಅನಿಲ್ ಚಿಕ್ಕಮಾದು ಅವರನ್ನು 2ನೇ ಆರೋಪಿಯನ್ನಾಗಿಸಿ ಎಫ್‌ಐಆರ್ ದಾಖಲಿಸಿದ್ದರು.
ಈ ಸಂಬಂಧ ಈ ಇಬ್ಬರು ನಾಯಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯ ಅನಿಲ್ ಚಿಕ್ಕಮಾದು ಹಾಗೂ ಡಾ.ಬಿ.ಜೆ. ವಿಜಯ್ ಕುಮಾರ್ ಅವರಿಗೆ ಜಾಮೀನು ನೀಡಿದೆ. ಇಬ್ಬರು ಪರವಾಗಿ ಹಿರಿಯ ವಕೀಲ ಚಂದ್ರಮೌಳಿ ಅವರು ವಾದಿಸಿದರು.