ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಗೆ ವಿದ್ಯುಕ್ತ ಚಾಲನೆ ನೀಡಿದರು.
ಇಂದು ಚಾಮುಂಡಿ ಬೆಟ್ಟದ ವೇದಿಕೆಯಲ್ಲಿ ನಾಡಹಬ್ಬ ದಸರಾಗೆ 9:45 ರಿಂದ 10.05 ನಿಮಿಷದ ವರೆಗಿನ ಶುಭ ವೃಶ್ಚಿಕ ಲಗ್ನದಲ್ಲಿ ಬೆಳ್ಳಿ ರಥದಲ್ಲಿ ಆಸೀನರಾಗಿರುವ ನಾಡದೇವತೆ ಚಾಮುಂಡಿ ತಾಯಿಯ ಉತ್ಸವ ಮೂರ್ತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದರು. ನಂತರ ಉದ್ಘಾಟನಾ ಭಾಷಣ ಮಾಡಿದರು.
ಇದಕ್ಕೂ ಮುನ್ನ ರಾಷ್ಟ್ರಪತಿಗಳು ಶಕ್ತಿ ದೇವತೆ ಚಾಮುಂಡಿ ತಾಯಿಯ ದರ್ಶನ ಪಡೆದರು. ರಾಷ್ಟ್ರಪತಿಗಳಿಗೆ ಸಾಂಪ್ರದಾಯಿಕವಾಗಿ ಸ್ವಾಗತ ನೀಡಿದ ನಂತರ ಹುಣಸೂರು ಮತ್ತು ಕೊಡಗು ಭಾಗದಿಂದ ಬಂದಿದ್ದ ಬುಡಕಟ್ಟು ಜನರ ಜೊತೆಗೆ ಫೋಟೋ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮೊದಲ ಬಾರಿಗೆ ರಾಷ್ಟ್ರಪತಿಯೊಬ್ಬರು ನಾಡಹಬ್ಬ ದಸರಾವನ್ನು ಉದ್ಘಾಟನೆ ಮಾಡುತ್ತಿರುವುದು ವಿಶೇಷವಾಗಿದೆ. ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಶಿ ಸೇರಿದಂತೆ ಕೇಂದ್ರದ ಹಲವು ಸಚಿವರು, ರಾಜ್ಯದ ಸಚಿವರು ವೇದಿಕೆಯಲ್ಲಿದ್ದರು.
ಇದನ್ನೂ ಓದಿ: ಇಂದು ರಾಷ್ಟ್ರಪತಿ ಮುರ್ಮುರಿಂದ ನಾಡಹಬ್ಬ ದಸರಾಗೆ ಚಾಲನೆ.. ವೈವಿಧ್ಯಮಯ ಕಾರ್ಯಕ್ರಮಗಳ ವಿವರ