ಮೈಸೂರು: ಪರಿವಾರ ಮತ್ತು ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಇದನ್ನು ಜಾರಿಗೊಳಿಸಲು ಕ್ರಮವಹಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.
ಮೈಸೂರಿನ ಜಲದರ್ಶಿನಿಯಲ್ಲಿ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ನಾಯಕ ಸಮಾಜದ ಮುಖಂಡರು ಹಾಗೂ ವಿವಿಧ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿ, ಈ ಅಧಿಸೂಚನೆ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮುಂದಿನ ಶನಿವಾರದಂದು ಸಭೆ ನಡೆಸಿ, ಕರ್ನಾಟಕದಲ್ಲಿ ಅತೀ ಶೀಘ್ರವೇ ಜಾರಿಗಳಿಸಲಾಗುವುದು ಎಂದು ಭರವಸೆ ನೀಡಿದರು.
ಇನ್ನು ಇದೇ ವೇಳೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ರೈತರು, ಕೃಷಿ ಚಟುವಟಿಕೆಗಳಿಗೆ ಸರ್ಕಾರದಿಂದ ದೊರಕುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಜಿಲ್ಲೆಯಲ್ಲಿ ಮಹಾರಾಜರ ಕಾಲದಿಂದಲೂ ಇರುವ ಕೆರೆಗಳಿಗೆ ನೀರು ತುಂಬಿಸುವ ಮೂಲಕ ಕೃಷಿ ಚಟುವಟಿಕೆ ನಡೆಸಲು ಅನುಕೂಲವಾಗುವಂತೆ ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ಜನರಿಗೆ ಕುಡಿಯುವ ನೀರಿಗೆ ತೊಂದರೆ ಉಂಟಾಗದಂತೆ ಸೂಕ್ತ ವ್ಯವಸ್ಥೆ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಾರಕಿಹೊಳಿ ಹೇಳಿದರು.
ಈ ಸಭೆಯಲ್ಲಿ ಸಂಸದ ಪ್ರತಾಪ ಸಿಂಹ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಸಿದ್ದರಾಜು ಹಾಗೂ ಸಮಾಜದ ಮುಖಂಡರು ಸೇರಿದಂತೆ ಹಲವರು ಹಾಜರಿದ್ದರು.