ಮೈಸೂರು: ಹುಣಸೂರು ಉಪ ಚುನಾವಣೆಗೆ ವ್ಯಾಪಕ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು , ಮತದಾರರು ಮತದಾನದ ಸಂದರ್ಭದಲ್ಲಿ ಮತಗಟ್ಟೆಗೆ ಮೊಬೈಲ್ ತರುವಂತಿಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.
ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಡಿಸೆಂಬರ್ 5 ರಂದು ನಡೆಯಲಿರುವ ಉಪ ಚುನಾವಣೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಹಿರಂಗ ಪ್ರಚಾರ ಮಂಗಳವಾರ ಸಂಜೆ ಕೊನೆಗೊಳ್ಳಲಿದೆ. ಮಂಗಳವಾರ ಸಂಜೆ 6 ಗಂಟೆಯಿಂದ ಡಿಸೆಂಬರ್ 5 ರ ಮಧ್ಯ ರಾತ್ರಿಯವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯಬಾರದೆಂದು ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ ಎಂದು ಹೇಳಿದರು.
ಮತದಾನದ ದಿನ ಮತಗಟ್ಟೆಗೆ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ ಹಾಗೂ ಅಭ್ಯರ್ಥಿಗಳ ಪರವಾಗಿ ಯಾರೂ ಮತಗಟ್ಟೆಯನ್ನು ಪೂಜೆ ಮಾಡುವಂತಿಲ್ಲ ಎಂದ ಜಿಲ್ಲಾಧಿಕಾರಿಗಳು, ಚುನಾವಣೆ ಬಹಿರಂಗ ಪ್ರಚಾರ ಅಂತ್ಯಗೊಂಡ 48 ಗಂಟೆ ಅವಧಿಯಲ್ಲಿ ಮಾಧ್ಯಮಗಳು ಸಹ ಯಾವುದೇ ರೀತಿಯ ಚುನಾವಣೆಗೆ ಸಂಬಂಧಿಸಿದ ಸುದ್ದಿಯನ್ನು ಪ್ರಸಾರ ಮಾಡುವಂತಿಲ್ಲ ಎಂದು ತಿಳಿಸಿದರು.
ಮತದಾನ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಡೆಯಲಿದ್ದು, ಮುಂಜಾಗೃತ ಕ್ರಮವಾಗಿ ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.