ಮೈಸೂರು: ಎಲ್ಪಿಜಿ ಸಿಲಿಂಡರ್ ಮತ್ತು ರೈಲು ಪ್ರಯಾಣ ದರವನ್ನು ಏರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆಯಿಂದ ಅಗ್ರಹಾರ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.
ಕೇಂದ್ರದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅಗತ್ಯ ವಸ್ತುಗಳಾದ ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಸಿಲಿಂಡರ್ ಬೆಲೆಗಳು ದಿನೇ ದಿನೇ ಏರಿಕೆ ಮಾಡುತ್ತಿರುವುದು ನಿಜಕ್ಕೂ ದುಃಖಕರವಾದ ಸಂಗತಿ. ಅಚ್ಛೆ ದಿನ ಎನ್ನುವುದು ಶ್ರೀಮಂತರ ಪಾಲಾಗಿದೆ. ಬಡವರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ನೋಟ್ ಬ್ಯಾನ್, ಜಿಎಸ್ಟಿ, ರೆರಾ ಕಾಯ್ದೆ ಹಾಗೂ ನೆರೆ ಹಾವಳಿಯಿಂದ ದೇಶದ ಜನತೆ ತತ್ತರಿಸಿ ಹೋಗಿದ್ದಾರೆ. ಜನರ ಕಷ್ಟಗಳನ್ನು ಆಲಿಸದೇ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಕಿರುಕುಳ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿ ಮೇಲೆ ಜನರು ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ನಂಬಿಕೆಗೆ ಮೋಸವಾಗುವ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.