ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದನ್ನು ತಡೆಯಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಗೆ 8 ಲಕ್ಷ ಕೋವಿಡ್ ಲಸಿಕೆ ಬೇಕೆಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.,
ಇಂದು ಸಚಿವ ಡಾ. ಸುಧಾಕರ್ ಮೈಸೂರಿಗೆ ಭೇಟಿ ನೀಡಿದ ಹಿನ್ನೆಲೆ ಅವರಿಗೆ ಮೈಸೂರು ಜಿಲ್ಲೆಯ ಕೋವಿಡ್ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡಲು ಬಂದ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ತಕ್ಷಣ ಜಿಲ್ಲೆಗೆ 8 ಲಕ್ಷ ಕೋವಿಡ್ ವ್ಯಾಕ್ಸಿನ್ ಬೇಡಿಕೆ ಇದೆ. ತುರ್ತಾಗಿ 3 ಲಕ್ಷ ಲಸಿಕೆ ಅಗತ್ಯ ಇದೆ. ಇದರ ಜತೆಗೆ ವೆಂಟಿಲೇಟರ್, ಆಕ್ಸಿಜನ್ ಹಾಗೂ ಇತರೆ ಔಷಧಿಗಳಿಗೂ ಬೇಡಿಕೆ ಇದೆ.
ಇದನ್ನೂ ಓದಿ: ಕೇಂದ್ರ ಸರ್ಕಾರ ಲಸಿಕೆ ವಿಚಾರದಲ್ಲಿ ತಾರತಮ್ಯ ಮಾಡುತ್ತಿಲ್ಲ: ಸಚಿವ ಸುಧಾಕರ್
ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕೂಡಲೇ ಇದನ್ನು ಬಗೆಹರಿಸಬೇಕೆಂದು ಆರೋಗ್ಯ ಸಚಿವರಲ್ಲಿ ಮನವಿ ಮಾಡಲಾಗುವುದು ಎಂದು ಹೇಳಿದರು. ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸಲಾಗಿದ್ದು, ಬೆಂಗಳೂರಿನಿಂದ ಮೈಸೂರಿಗೆ ಹೆಚ್ಚಾಗಿ ಚಿಕಿತ್ಸೆಗಾಗಿ ಆಗಮಿಸುತ್ತಿರುವ ಕೋವಿಡ್ ಸೋಂಕಿತರ ಬಗ್ಗೆ ನಿಗಾ ವಹಿಸಲಾಗುವುದು ಎಂದು ಎಸ್.ಟಿ. ಸೋಮಶೇಖರ್ ತಿಳಿಸಿದರು.