ಮೈಸೂರು: ತಿ.ನರಸೀಪುರ ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸುನಿಲ್ ಕುಮಾರ್ ಎಂಬ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಕಾಲೇಜಿನಲ್ಲಿರುವ ಸಹಾಯಕ ಪ್ರಾಧ್ಯಾಪಕ ಸುನಿಲ್ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನೀಡುತ್ತಿದ್ದಾರೆ. ಅಂಕ ಕಡಿತದ ಭಯ ಹುಟ್ಟಿಸಿ ಹಾಗೂ ಪ್ರೀತಿ ಮಾಡುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ವಿದ್ಯಾರ್ಥಿನಿಯರು ದೂರಿದ್ದಾರೆ.
ಕೇವಲ ದಲಿತ ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡಿ ತಮ್ಮ ಜೀವನ ಹಾಳು ಮಾಡುತ್ತಿದ್ದಾರೆ. ಪ್ರೊಫೆಸರ್ ಅಸಭ್ಯವಾಗಿ ಮಾತನಾಡಿರುವ ಆಡಿಯೋ ಕ್ಲಿಪ್ಸ್ ನಮ್ಮ ಬಳಿ ಇವೆ ಎಂದು ನೊಂದ ವಿದ್ಯಾರ್ಥಿನಿಯರು ಹೇಳಿದ್ದಾರೆ.
ಈ ಹಿಂದೆ ಕಾಲೇಜಿನ ವಿದ್ಯಾರ್ಥಿನಿಯರು ಈ ಕುರಿತು ಕಮಿಷನರ್ಗೆ ಅನಾಮಧೇಯ ಪತ್ರ ಬರೆದಿದ್ದಾರೆ. ಈ ಬಗ್ಗೆ ಹಲವು ಮುಖಂಡರು ಎಸ್ಸಿ, ಎಸ್ಟಿ ಸಭೆಗಳಲ್ಲಿ ಪ್ರಸ್ತಾಪಿಸಿದ್ದಾರೆ. ಆದರೆ ಮೇಲಾಧಿಕಾರಿಗಳು ಮಾತ್ರ ಸಮಸ್ಯೆ ಕುರಿತಂತೆ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನಲಾಗುತ್ತಿದೆ.
ಈ ಸಂಬಂಧ ದಲಿತ ಸಂಘರ್ಷ ಸಮಿತಿ ತಾಲೂಕು ಮುಖಂಡ ಸೋಸಲೆ ಶಶಿಕಾಂತ್ ಮಾಧ್ಯಮದವರೊಂದಿಗೆ ಮಾತನಾಡಿ, ಕೂಡಲೇ ಪ್ರಾಧ್ಯಾಪಕ ಸುನಿಲ್ ಕುಮಾರ್ ಅವರನ್ನು ವಜಾ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಾಲೇಜಿನ ಮುಂಭಾಗ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.