ಮೈಸೂರು: ಯಾವುದೇ ಪ್ರಯಾಣದ ಇತಿಹಾಸ ಇಲ್ಲದೇ ಇದ್ದರೂ ಪರೀಕ್ಷೆ ಮಾಡಿದಾಗ ಜಿಲ್ಲೆಯ 6 ಮಂದಿಗೆ ಕೋವಿಡ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಸೋಂಕಿತರನ್ನು ತುರ್ತು ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರಲ್ಲಿ 5 ಮಂದಿ 60 ವರ್ಷ ಮೇಲ್ಪಟ್ಟವರಾಗಿದ್ದು, ಒಬ್ಬರು 48 ವರ್ಷ ವಯಸ್ಸಿನ ವ್ಯಕ್ತಿ ಎಂದು ಮೈಸೂರು ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
ಈಗಾಗಲೇ ಇಲಾಖೆಯು ಸರ್ಕಾರದ ಮಾರ್ಗಸೂಚಿಯಂತೆ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲಾಸ್ಪತ್ರೆಗಳಲ್ಲಿ 1,700ಕ್ಕೂ ಹೆಚ್ಚು ಬೆಡ್ ವ್ಯವಸ್ಥೆಯಾಗಿದೆ. ಜಿಲ್ಲೆಯಿಂದ ಕೇರಳಕ್ಕೆ ತೆರಳುವವರ ಮೇಲೆ ಹಾಗೂ ಕೇರಳದಿಂದ ಬರುವವರ ಮೇಲೆ ನಿಗಾ ವಹಿಸಲಾಗಿದೆ. ಆಶಾ ಕಾರ್ಯಕರ್ತರಿಗೆ ಕೋವಿಡ್ ಅರಿವು ಮೂಡಿಸಲು ಜಿಲ್ಲಾಡಳಿತ ಸಿದ್ದತೆ ಮಾಡಿಕೊಂಡಿದೆ ಎಂದು ಅವರು ತಿಳಿಸಿದರು.
ಕೇರಳ ಗಡಿಭಾಗದ ಬಾವಲಿ ಚೆಕ್‌ಪೋಸ್ಟ್‌ಗೆ ಡಿಸಿ ಭೇಟಿ: ಕೇರಳದಲ್ಲಿ ರೂಪಾಂತರಿ ಜೆಎನ್1 ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಕೇರಳ ಹಾಗೂ ಮೈಸೂರು ಗಡಿಭಾಗದಲ್ಲಿರುವ ಬಾವಲಿ ಚೆಕ್ ಪೋಸ್ಟ್‌ಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ ನೀಡಿ, ಮುಂಜಾಗ್ರತೆ ಕ್ರಮಗಳನ್ನು ಪರಿಶೀಲಿಸಿದರು. ಕೇರಳದಿಂದ ಬರುವ ವಾಹನಗಳ ತಪಾಸಣೆ ಮಾಡಿದರು.
ಶುಕವನ ಪಕ್ಷಿಧಾಮ ಬಂದ್: ಮೈಸೂರಿನ ದತ್ತ ನಗರದಲ್ಲಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಒಳಗಿರುವ ಶುಕವನ, ಬೋನ್ಸಾಯ್ ವನ ಹಾಗೂ ವಿಶ್ವಂ ವಸ್ತು ಸಂಗ್ರಹಾಲಯವನ್ನು ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡಿ.22ರಿಂದ ಅನಿರ್ದಿಷ್ಟಾವಧಿಗೆ ಮುಚ್ಚಲಾಗಿದೆ ಎಂದು ಅವಧೂತ ದತ್ತಪೀಠ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂಓದಿ: ದಕ್ಷಿಣ ಕನ್ನಡ ಗಡಿಭಾಗದಲ್ಲಿ ಕೊರೊನಾ ತಪಾಸಣೆ ಇಲ್ಲ, ಜಾಗೃತಿಗೆ ಜಿಲ್ಲಾಡಳಿತ ನಿರ್ಧಾರ