ಮೈಸೂರು : ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಸರ್ಕಾರವನ್ನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕು ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಮನವಿ ಮಾಡಿದರು. ಇಂದು ನಗರದ ವಾಣಿವಿಲಾಸ ರಸ್ತೆಯಲ್ಲಿರುವ ಬಿಜೆಪಿ ಮೈಸೂರು ವಿಭಾಗ ಮಾಧ್ಯಮ ಕೇಂದ್ರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯದ ಹಲವಾರು ಅಭಿವೃದ್ಧಿ ಕೆಲಸಗಳಿಗೆ ಮತ್ತು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಹೆಚ್ಚಿನ ಅನುದಾನವನ್ನು ನೀಡಿದ್ದಾರೆ ಎಂದು ಹೇಳಿದರು.
ಮೈಸೂರು-ಬೆಂಗಳೂರು ನಡುವೆ ದಶಪಥ ರಸ್ತೆಯನ್ನು ನಿರ್ಮಾಣ ಮಾಡಿ, ಅದರ ಉದ್ಘಾಟನೆ ಮಾಡಿದ್ದಾರೆ. ಈ ಮೂಲಕ ವಾಹನ ಸವಾರರಿಗೆ ಮತ್ತು ಜನತೆಗೆ ಬಹಳ ಅನುಕೂಲ ಮಾಡಿಕೊಟ್ಟಿದ್ದಾರೆ. ಇದರಿಂದಾಗಿ ಮೈಸೂರಿಗೆ ಮತ್ತಷ್ಟು ಕೈಗಾರಿಕೆಗಳು ಬರಲಿದ್ದು, ಸಾವಿರಾರು ಮಂದಿಗೆ ಉದ್ಯೋಗ ಸಿಗಲಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿನಲ್ಲಿ ಸೆಮಿ ಕಂಡಕ್ಟರ್ ಹಬ್ ನಿರ್ಮಾಣ ಮಾಡುವ ಬಗ್ಗೆ ಘೋಷಣೆ ಮಾಡಿದ್ದು, ಇಲ್ಲಿ ನಿರ್ಮಾಣವಾದರೆ, ವಾಹನಗಳಿಗೆ, ಎಲೆಕ್ಟ್ರಾನಿಕ್ ವಸ್ತುಗಳಿಗೆ ಬೇಕಾದ ಸೆಮಿ ಕಂಡಕ್ಟರ್ ಇಲ್ಲೇ ಉತ್ಪಾದನೆಯಾಗಲಿದೆ. ಮತ್ತು ಇಲ್ಲಿಂದಲೇ ಪೂರೈಕೆಯಾಗಲಿದೆ. ಈ ಹಬ್ ನಿರ್ಮಾಣದಿಂದಾಗಿ ಸಾವಿರಾರು ಮಂದಿಗೆ ಉದ್ಯೋಗ ಸಿಗಲಿದೆ. ಅಲ್ಲದೇ ಬೆಂಗಳೂರು ಬಿಟ್ಟರೆ ಮೈಸೂರೇ ಬೃಹತ್ ನಗರವಾಗಿ ಬೆಳೆದು, ವಿಶ್ವದ ಭೂಪಟದಲ್ಲಿ ಗುರುತಿಸಿಕೊಳ್ಳಲಿದೆ ಎಂದು ತಿಳಿಸಿದರು.
ಉಡಾನ್ ಯೋಜನೆಯಡಿ ಎಲ್ಲಾ ವಿಮಾನ ನಿಲ್ದಾಣಗಳಿಗೂ ವಿಮಾನ ಹಾರಾಟ ಹಾಗೂ ಸಂಪರ್ಕವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಲ್ಪಿಸಿದೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣ ವಿಸ್ತರಣೆ ಹಾಗೂ ಅಭಿವೃದ್ಧಿಗೂ ಅನುದಾನ ನೀಡಿದೆ. ಮೈಸೂರಿನಲ್ಲಿ ರಿಂಗ್ ರೋಡ್ ನಿರ್ಮಾಣ ಮಾಡಲಾಗಿದೆ. ವಾಹನಗಳ ಸುಗಮ ಸಂಚಾರಕ್ಕಾಗಿ ಫೆರಿಫಲ್ ರಸ್ತೆಯ ನಿರ್ಮಾಣ ಕಾರ್ಯ ಕೂಡ ನಡೆಯುತ್ತಿದೆ ಎಂದರು.
ದೇಶದ ಆರ್ಥಿಕತೆಯನ್ನು ಬಲಿಷ್ಠಗೊಳಿಸಲು ಕ್ರಮ : ಪ್ರಧಾನಿ ಮೋದಿಯವರು ಇಡೀ ಭಾರತದ ಆರ್ಥಿಕತೆಯನ್ನು ಬಲಿಷ್ಠಗೊಳಿಸಲು ಹಲವಾರು ಕ್ರಮ ಕೈಗೊಳ್ಳುತ್ತಿದ್ದಾರೆ. ಭಾರತದ ಆರ್ಥಿಕತೆಯನ್ನು ಐದು ಟ್ರಿಲಿಯನ್ ಡಾಲರ್ ಗೆ ಹೆಚ್ಚಿಸುತ್ತಿದ್ದಾರೆ. ಕರ್ನಾಟಕದಲ್ಲೂ ಒಂದು ಟ್ರಿಲಿಯನ್ ಆರ್ಥಿಕತೆ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ. ಪ್ರತಿಯೊಂದು ಮನೆಗೂ ಜಲಜೀವನ್ ಮಿಷನ್, ಅಮೃತ್ ಯೋಜನೆಯಡಿ ಶುದ್ದ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಪ್ರತಿಯೊಂದು ಗ್ರಾಮಕ್ಕೂ, ಮನೆಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ರಸ್ತೆ ಸಂಪರ್ಕಗಳನ್ನು ಕಲ್ಪಿಸಿ, ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದ್ರು.
ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ಅಭಿವೃದ್ಧಿ ಸಾಧ್ಯ : ಡಬಲ್ ಇಂಜಿನ್ ಸರ್ಕಾರವಿದ್ದರೆ ಮಾತ್ರ ರಾಜ್ಯ ಹಾಗೂ ದೇಶದ ಅಭಿವೃದ್ಧಿಯಾಗಲು ಸಾಧ್ಯ. ಹಾಗಾಗಿ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಮತದಾರರು 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಬೇಕು. ಮೈಸೂರಿನಲ್ಲಿ ಕೆ.ಆರ್. ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್.ಶ್ರೀ ವತ್ಸ, ಚಾಮರಾಜ ಕ್ಷೇತ್ರದ ಎಲ್. ನಾಗೇಂದ್ರ, ನರಸಿಂಹರಾಜ ಕ್ಷೇತ್ರದ ಸಂದೇಶ ಸ್ವಾಮಿ ಅವರನ್ನು ಗೆಲ್ಲಿಸಿಕೊಡಬೇಕೆಂದು ಯುಪಿ ಡಿಸಿಎಂ ಮನವಿ ಮಾಡಿದರು.
ಕಾಂಗ್ರೆಸ್ ಕಳೆದ 60 ವರ್ಷಗಳಿಂದ ರಾಜ್ಯದಲ್ಲಿ ಮತ್ತು ದೇಶದಲ್ಲಿ ಆಡಳಿತ ನಡೆಸಿದರೂ ಬಡವರ ಉದ್ಧಾರವಾಗಿಲ್ಲ, ರೈತರ ಏಳಿಗೆಯಾಗಿಲ್ಲ. ಸರ್ಕಾರದ ಯಾವುದೇ ಯೋಜನೆಗಳ ಫಲ ನೇರವಾಗಿ ಜನರಿಗೆ ತಲುಪುತ್ತಿರಲಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪ್ರತಿಯೊಂದು ಯೋಜನೆ ಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸುತ್ತಿದೆ. ಇದರಿಂದಾಗಿ ಜನರ, ರೈತರ ಅಭಿವೃದ್ಧಿಯಾಗುತ್ತಿದೆ ಎಂದು ತಿಳಿಸಿದರು.
ಜೆಡಿಎಸ್ ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು : ಕಾಂಗ್ರೆಸ್ ನವರು ಸುಳ್ಳು ಭರವಸೆಗಳನ್ನು ಜನರಿಗೆ ನೀಡಿ, ಮರಳು ಮಾಡಿ ಅಧಿಕಾರಕ್ಕೆ ಬರುವ ಪ್ರಯತ್ನ ನಡೆಸುತ್ತಿದ್ದಾರೆ. ಕರ್ನಾಟಕದ ಜನರು ಇದಕ್ಕೆ ಅವಕಾಶ ನೀಡಬಾರದು. ಜೆಡಿಎಸ್ -ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖವಿದ್ದಂತೆ, ಅವರು ಒಳ ಒಪ್ಪಂದ ಮಾಡಿಕೊಂಡಿರುತ್ತಾರೆ. ಹಾಗಾಗಿ ಜೆಡಿಎಸ್ಗೆ ಮತ ನೀಡಿದರೆ, ಕಾಂಗ್ರೆಸ್ಗೆ ನೀಡಿದಂತೆ. ಜೆಡಿಎಸ್ ನ್ನು ಜನರು ತಿರಸ್ಕರಿಸಬೇಕು. 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಪ್ರಚಂಡ ಬಹುಮತದೊಂದಿಗೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು.
ಉತ್ತರ ಪ್ರದೇಶದ ಚುನಾವಣೆಯಲ್ಲಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯವರು ಪ್ರಚಾರ ನಡೆಸಿದರೂ, ಅಲ್ಲಿ ಅವರ ಯಾವುದೇ ಜಾದೂ ನಡೆಯಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬರಲಿಲ್ಲ. ಅದೇ ರೀತಿ ಕರ್ನಾಟಕ ರಾಜ್ಯದ ಚುನಾವಣೆಯಲ್ಲಿಯೂ ಅವರು ಬಂದು ಪ್ರಚಾರ ನಡೆಸಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಪಾಠಕ್ ಭವಿಷ್ಯ ನುಡಿದರು.
ಮಾಧ್ಯಮಗೋಷ್ಟಿಯಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ, ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಶಿವಕುಮಾರ್, ಬಿಜೆಪ ನಗರ ಕಾರ್ಯಾಧ್ಯಕ್ಷ ಹೆಚ್.ಜಿ. ಗಿರಿಧರ್, ಜಿಲ್ಲಾ ಸಹ ವಕ್ತಾರ ಡಾ. ಕೆ.ವಸಂತ್ ಕುಮಾರ್, ಮೈಸೂರು ವಿಭಾಗ ಮಾಧ್ಯಮ ಕೇಂದ್ರದ ಸಂಯೋಜಕ ನಾಗೇಶ್, ಜಿಲ್ಲಾ ಮಾಧ್ಯಮ ಸಂಚಾಲಕ ಮಹೇಶ್ ರಾಜೇ ಅರಸ್, ಸಹ ವಕ್ತಾರ ಕೇಬಲ್ ಮಹೇಶ್, ಸಹ ಸಂಚಾಲಕ ಪ್ರದೀಪ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಬಸವರಾಜ ಬೊಮ್ಮಾಯಿಯಂಥ ಭ್ರಷ್ಟ ಸಿಎಂಅನ್ನು ಈ ಹಿಂದೆ ನೋಡಿರಲಿಲ್ಲ: ಸಿದ್ದರಾಮಯ್ಯ