ಮೈಸೂರು: ನಾನು ವರ್ಷ, ತಿಂಗಳುಗಳ ಬಗ್ಗೆ ಮಾತನಾಡುವುದಿಲ್ಲ, ರಾಜ್ಯ ಸರ್ಕಾರ ಅತಿ ಶೀಘ್ರದಲ್ಲೇ ಪತನವಾಗಲಿದೆ. ಸರ್ಕಾರದ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಕೆ ಎಸ್.ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಇಂದು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅತಿ ಶೀಘ್ರದಲ್ಲೇ ಪತನವಾಗಲಿದೆ. ಯಾವ ಕ್ಷಣದಲ್ಲಾದರೂ ಸರ್ಕಾರ ಬಿದ್ದು ಹೋಗಬಹುದು. ಸರ್ಕಾರ ಪತನವಾದರೆ ಮತ್ತೊಮ್ಮೆ ಚುನಾವಣೆಗೆ ಹೋಗುವುದು ಸರಿಯಾದ ಮಾರ್ಗ. ಹೊಸ ಸರ್ಕಾರ ಜನರಿಂದ ಆಯ್ಕೆಯಾದರೆ ಮಾತ್ರ ಉತ್ತಮ ಎಂದು ಕೆ ಎಸ್.ಈಶ್ವರಪ್ಪ ಹೇಳಿದ್ದಾರೆ.
ಜೆಡಿಎಸ್ ಜೊತೆ ಮೈತ್ರಿ ಇಲ್ಲ: ದಕ್ಷಿಣ ಶಿಕ್ಷಕರ ಕ್ಷೇತ್ರದ ಮುಂದಿನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ - ಜೆಡಿಎಸ್ ನಡುವೆ ಯಾವುದೇ ಮೈತ್ರಿ ಇಲ್ಲ. ಬಿಜೆಪಿ ಜೆಡಿಎಸ್ ನಡುವೆ ಮುಂದಿನ ಲೋಕಸಭೆಗೆ ಮಾತ್ರ ಚುನಾವಣೆಗೆ ಮೈತ್ರಿ ಇದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ಗೆ ಬಿಜೆಪಿ ಬೆಂಬಲ ನೀಡುವುದಿಲ್ಲ. ಬಿಜೆಪಿಯಲ್ಲಿ 12 ಮಂದಿ ಆಕಾಂಕ್ಷಿಗಳಿದ್ದು, ಒಮ್ಮೆಯೂ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಬಿಜೆಪಿ ಗೆದ್ದಿಲ್ಲ, ಮುಂದಿನ ಚುನಾವಣೆಯಲ್ಲಾದರೂ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಬಿಜೆಪಿ ಗೆಲ್ಲಲು ಶ್ರಮಿಸುವಂತೆ ಕರೆ ನೀಡಲಾಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿಕೆ ನೀಡಿದರು.
ಹೈ- ಕಮಾಂಡ್ಗೆ ತಾಕತ್ತಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಿ: ಕಾಂಗ್ರೆಸ್ ಹೈ ಕಮಾಂಡ್ಗೆ ತಾಕತ್ತಿದ್ದರೆ ಪಕ್ಷದ ಶಿಸ್ತು ಉಲ್ಲಂಘನೆ ಮಾಡುವವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಿ. ಹೈಕಮಾಂಡ್ ಎಚ್ಚರಿಕೆ ನೀಡಿದ ಬಳಿಕವೂ ನಾಯಕರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಈ ಬಗ್ಗೆ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಕೆಸಿ.ವೇಣುಗೋಪಾಲ್ ಸಭೆ ನಡೆಸಿ ಎಚ್ಚರಿಕೆ ನೀಡಿದ್ದರು, ಅವರು ವಾಪಸ್ ಹೋಗುತ್ತಿದ್ದಂತೆ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದರು. ಜೊತೆಗೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದೆ. ಕಾರಣ ಜಾತಿ ಗಣತಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ, ಆದರೆ, ಡಿಸಿಎಂ ಡಿ ಕೆ ಶಿವಕುಮಾರ್ ಜಾತಿ ಗಣತಿ ವರದಿ ಬಿಡುಗಡೆ ಮಾಡುವುದಿಲ್ಲ ಎಂದು ಹೇಳುತ್ತಾರೆ.
ಈ ವಿಚಾರದಲ್ಲಿ ಇಬ್ಬರು ಒಂದೊಂದು ರೀತಿ ಹೇಳಿಕೆ ನೀಡುತ್ತಿದ್ದಾರೆ. ಇವರಿಬ್ಬರ ನಡುವೆ ಹೊಂದಾಣಿಕೆ ಇಲ್ಲ. ಆದ್ದರಿಂದ ರಾಜ್ಯದಲ್ಲಿ ಇರುವುದು ಸಮ್ಮಿಶ್ರ ಸರ್ಕಾರ ಎಂದು ಲೇವಡಿ ಮಾಡಿದ ಈಶ್ವರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿ ವರದಿ ಬಿಡುಗಡೆ ಮಾಡುತ್ತೇನೆ ಎಂಬ ನಾಟಕ ಮಾಡುತ್ತಿದ್ದಾರೆ. ಇದಕ್ಕೆ ಲಿಂಗಾಯತ, ವೀರಶೈವ ಹಾಗೂ ಒಕ್ಕಲಿಗ ಸಮುದಾಯದ ಮಠಾಧೀಶರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ಜಾತಿ ಗಣತಿ ವರದಿ ಬಿಡುಗಡೆ ಮಾಡುವುದಿಲ್ಲ ಎಂದು ಮಾಜಿ ಮಂತ್ರಿ ಕೆ ಎಸ್. ಈಶ್ವರಪ್ಪ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ಗೆ ಗೈರು: ಸಚಿವ ಸತೀಶ ಜಾರಕಿಹೊಳಿ ಹೇಳಿದ್ದೇನು?