ಮೈಸೂರು: ಸಾಂಸ್ಕೃತಿಕ ನಗರದಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ರಾಜ್ಯಾದ್ಯಂತ ವಿದ್ಯಾರ್ಥಿ ಸಂಘಟನೆಗಳು, ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸಿ ಶೀಘ್ರವೇ ಆರೋಪಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿವೆ.
ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ಮೈಸೂರು ನಗರದಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿತು. ಇಂತಹ ಘಟನೆ ಹೊರ ರಾಜ್ಯದಿಂದ ವಿದ್ಯಾಭ್ಯಾಸಕ್ಕಾಗಿ ಮೈಸೂರಿಗೆ ಬರುವ ವಿದ್ಯಾರ್ಥಿಗಳಲ್ಲಿ ಭಯವ ವಾತಾವರಣ ಮೂಡಿಸುತ್ತದೆ. ಅದಕ್ಕಾಗಿ ಕೂಡಲೇ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರ ಅಪರಾಧಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.
ಅಲ್ಲದೆ, ವಿದ್ಯಾರ್ಥಿಗಳು ಸ್ವತಂತ್ರವಾಗಿ ಓಡಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದರು.
ಕಪ್ಪು ಬಟ್ಟೆ ಧರಿಸಿ ಕಲಬುರಗಿಯಲ್ಲಿ ಯುವತಿಯರ ಪ್ರತಿಭಟನೆ
ಸಾಂಸ್ಕೃತಿಕ ನಗರಿಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿ ನಾಲ್ಕು ಚಕ್ರ ತಂಡ ನೇತೃತ್ವದಲ್ಲಿ ನಗರದ ಎಸ್ವಿಪಿ ವೃತ್ತದಲ್ಲಿ ಕಪ್ಪು ಪಟ್ಟಿ ಧರಿಸಿ ಯುವತಿಯರು ಪ್ರತಿಭಟನೆ ನಡೆಸಿದರು. ಹೆಣ್ಣು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಿಗಳನ್ನು ಬಂಧಿಸಿ ಎನ್ಕೌಂಟರ್ ಮಾಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಅಲ್ಲದೆ, ರಾಜ್ಯದಲ್ಲಿ ಇತ್ತೀಚಿಗೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೆಲ ಪ್ರಕರಣಗಳು ಮುಚ್ಚಿಹೋಗುತ್ತಿವೆ. ಹೀಗಾಗಿ ಕೂಡಲೇ ಸಂಬಂಧಪಟ್ಟ ಇಲಾಖೆ ಹಾಗೂ ಸರ್ಕಾರ ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾನಿರತ ಯುವತಿಯರು ಆಗ್ರಹಿಸಿದ್ದಾರೆ.
ಶಿವಮೊಗ್ಗ: ರಾಜ್ಯ ನಾಗರೀಕರ ರಕ್ಷಣಾ ಸಮಿತಿ ಪ್ರತಿಭಟನೆ
ಮೈಸೂರಿನ ಚಾಮುಂಡೇಶ್ವರಿ ಬೆಟ್ಟದ ತಪ್ಪಲಿನಲ್ಲಿ ನಡೆದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಲ್ಲಿ ಸೂಕ್ತ ಬಂದೋಬಸ್ತ್ ಮಾಡಿ ಮಹಿಳೆಯರ ಮಾನ, ಪ್ರಾಣ ರಕ್ಷಣೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ನಾಗರೀಕರ ರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಸಾಮೂಹಿಕ ಅತ್ಯಾಚಾರ ಪ್ರಕರಣವು ಇಡೀ ರಾಜ್ಯವೇ ತಲೆ ತಗ್ಗಿಸುವಂತೆ ಮಾಡಿದೆ. ಹಾಗಾಗಿ ಸರ್ಕಾರ ಕೂಡಲೇ ಆರೋಪಿಗಳನ್ನು ಬಂಧಿಸಿ ಸಂತ್ರಸ್ತೆಗೆ ನ್ಯಾಯ ಒದಗಿಸಿ ಕೊಡಬೇಕು. ಜೊತೆಗೆ ರಾಜ್ಯದ ಎಲ್ಲಾ ಪ್ರವಾಸಿ ತಾಣಗಳು ಹಾಗೂ ಬೆಟ್ಟ, ಗುಡ್ಡದ ಮೇಲಿರುವ ದೇವಸ್ಥಾನಗಳ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಹೆಚ್ಚಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಧಾರವಾಡದಲ್ಲಿ ಎಐಎಮ್ಎಸ್ಎಸ್ ಪ್ರತಿಭಟನೆ
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವಿದ್ಯಾರ್ಥಿಗಳು ಅತ್ಯಾಚಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅತ್ಯಾಚಾರಿಗಳನ್ನು ಕೂಡಲೇ ಬಂಧಿಸಿ ಉಗ್ರ ಶಿಕ್ಷೆ ನೀಡುವಂತೆ ಆಗ್ರಹಿಸಿದರು.
ಅಲ್ಲದೆ, ಅಶ್ಲೀಲ ಸಿನಿಮಾ, ಮದ್ಯಪಾನವನ್ನು ನಿಷೇಧಿಸಬೇಕು. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕಾನೂನು ಜಾರಿಗೊಳಿಸಬೇಕು. ಹೆಣ್ಣು ಮಕ್ಕಳ ಮೇಲೆ ಶೋಷಣೆ ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಸೂಕ್ತ ಕಾನೂನು ಜಾರಿಗೊಳಿಸಬೇಕು ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಸರ್ಕಾರಕ್ಕೆ ಒತ್ತಾಯಿಸಿದರು.