ಮೈಸೂರು: ಜಿಲ್ಲೆಯ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ನಾಮಪತ್ರ ಸಲ್ಲಿಕೆಯ ಆರನೇ ದಿನ ಐದು ನಾಮಪತ್ರ ಸಲ್ಲಿಕೆಯಾಗಿವೆ.
ಉತ್ತಮ ಪ್ರಜಾಕೀಯ ಪಾರ್ಟಿ ಅಭ್ಯರ್ಥಿಯಾಗಿ ಸಿ.ಪಿ. ದಿವಾಕರ್, ಪಕ್ಷೇತರ ಅಭ್ಯರ್ಥಿಯಾಗಿ ಗುರುಲಿಂಗಯ್ಯ, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿಯಾಗಿ ಎನ್. ಪುಟ್ಟನಂಜಯ್ಯ, ಪಕ್ಷೇತರ ಅಭ್ಯರ್ಥಿಯಾಗಿ ಹರೀಶ್ ಜೆ.ಎಂ ಹಾಗೂ ಜಾತ್ಯಾತೀತ ಜನತಾ ದಳದ ಅಭ್ಯರ್ಥಿಯಾಗಿ ಸೋಮಶೇಖರ್ ಅವರು ನಾಮಪತ್ರ ಸಲ್ಲಿಸಿದ್ದಾರೆ ಎಂದು ಹುಣಸೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ತಿಳಿಸಿದ್ದಾರೆ.
ಹುಣಸೂರು ವಿಧಾನಸಭಾ ಉಪಚುನಾವಣೆ ಡಿಸೆಂಬರ್ 5 ರಂದು ನಡೆಯಲಿದ್ದು, ನವೆಂಬರ್ 11 ರಿಂದ ಡಿಸೆಂಬರ್ 11 ರವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಶಸ್ತ್ರಾಸ್ತ್ರ ಕಾಯ್ದೆಯಡಿ ಆಯುಧ ಹೊಂದಿರುವವರು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಲು ಹಾಗೂ ಯಾವುದೇ ವ್ಯಕ್ತಿ ಸ್ಫೋಟಕ ಹಾಗೂ ಮಾರಕಾಸ್ತ್ರಗಳನ್ನು ಒಯ್ಯುವ ಅಥವಾ ಹಿಡಿದುಕೊಂಡು ಓಡಾಡುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.