ಮೈಸೂರು : ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಮ್ಮ ನಿವಾಸದಲ್ಲಿ ಅನಧಿಕೃತವಾಗಿ ಸ್ವಿಮ್ಮಿಂಗ್ ಪೂಲ್ ಹಾಗೂ ಜಿಮ್ ಕಟ್ಟಿಸಿದ್ದಾರೆ ಎಂಬ ನಮ್ಮ ದೂರಿಗೆ ಪ್ರಾದೇಶಿಕ ಆಯುಕ್ತರ ತನಿಖಾ ವರದಿ ಪುಷ್ಠಿ ನೀಡಿದೆ. ಸತ್ಯಕ್ಕೆ ಜಯ ಸಿಕ್ಕಂತಾಗಿದೆ ಎಂದು ಜೆಡಿಎಸ್ ಮುಖಂಡ ಹಾಗೂ ನಗರ ಪಾಲಿಕೆ ಮಾಜಿ ಸದಸ್ಯ ಕೆ ವಿ ಮಲ್ಲೇಶ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಕೊರೊನಾ ಹಾವಳಿ ಮಿತಿ ಮೀರುತ್ತಿರುವ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಅನಧಿಕೃತವಾಗಿ ಸ್ವಿಮ್ಮಿಂಗ್ ಪೂಲ್ ಹಾಗೂ ಜಿಮ್ ನಿರ್ಮಿಸಿಕೊಂಡು ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ ಎಂದು ಕೆ ವಿ ಮಲ್ಲೇಶ್ ಆರೋಪಿಸಿದ್ದರು. ಇದರ ಬೆನ್ನಲ್ಲೇ ಪ್ರಾದೇಶಿಕ ಆಯುಕ್ತರಿಗೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ತನಿಖೆಗೆ ಒತ್ತಾಯಿಸಿದ್ದರು.
ಆರೋಪವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರವು, ಪ್ರಾದೇಶಿಕ ಆಯುಕ್ತರಿಗೆ ತನಿಖೆಗೆ ಆದೇಶಿಸಿತ್ತು. ತನಿಖಾ ವರದಿಯಲ್ಲಿ ಅಕ್ರಮವಾಗಿ ಸ್ವಿಮ್ಮಿಂಗ್‌ಪೂಲ್ ನಿರ್ಮಾಣವಾಗಿರುವುದು ಬಹಿರಂಗವಾಗಿದೆ. ‘ಜಿಲ್ಲಾಧಿಕಾರಿಗಳು ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಸ್ವಿಮ್ಮಿಂಗ್ ಪೂಲ್ ಹಾಗೂ ಜಿಮ್ ಕಟ್ಟಿಸಿದ್ದಾರೆ ಎಂದು ಪ್ರಾದೇಶಿಕ ಆಯುಕ್ತರು ಸರ್ಕಾರಕ್ಕೆ ವರದಿ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜುಕೊಳ ನಿರ್ಮಾಣಕ್ಕೆ ಸಂಬಂಧಪಟ್ಟಂತೆ 32 ಲಕ್ಷ ರೂ. ಗಳಿಗೆ ಅಂದಾಜುಪಟ್ಟಿಯನ್ನು ತಯಾರಿಸಿದೆ. ಅಂದಾಜುಪಟ್ಟಿಗೆ ತಾಂತ್ರಿಕ ವರ್ಗದವರಿಂದ ಅಥವಾ ಲೋಕೋಪಯೋಗಿ ಇಲಾಖೆಯಿಂದ ಅನುಮೋದನೆ ಪಡೆದಿಲ್ಲ. ಈಜುಕೊಳದ ನಿರ್ಮಾಣದ ಬಗ್ಗೆ ಯಾವುದೇ ಪೂರ್ವಭಾವಿ ಆಡಳಿತಾತ್ಮಕ ಮಂಜೂರಾತಿ ಪಡೆದಿಲ್ಲ.
ಈಜುಕೊಳದ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಯಾವುದೇ ಕಾರ್ಯಾದೇಶ ಇಲ್ಲ. ಕಾಮಗಾರಿ ನಿರ್ವಹಿಸಿದವರ ಒಪ್ಪಂದ ಪತ್ರಗಳು ಇಲ್ಲ. ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮೋದನೆ ಪಡೆದಿಲ್ಲ. ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜುಕೊಳ ನಿರ್ಮಾಣ ಮಾಡಿರುವುದು ಯಾವುದೇ ಸಾರ್ವಜನಿಕರಿಗೆ ಉಪಯೋಗಿಸಲು ಸಾಧ್ಯವಿರುವುದಿಲ್ಲ’ ಎಂದು ವರದಿಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಡಿಸಿ ನಿವಾಸದಲ್ಲಿ ಈಜುಕೊಳ ನಿರ್ಮಾಣ: ಪ್ರಾದೇಶಿಕ ಆಯುಕ್ತರಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ
ಈ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ಮುಖಂಡ ಮಲ್ಲೇಶ್, ಇದು ಸತ್ಯಕ್ಕೆ ಸಂದ ಜಯವಾಗಿದೆ. ಹಾಗಾಗಿ, ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮೈಸೂರಿನ ಸಾರ್ವಜನಿಕರ ಪರವಾಗಿ ಒತ್ತಾಯಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಲ್ಲದೇ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.