ಮೈಸೂರು : ಆಷಾಢ ಮಾಸಕ್ಕೆ ಚಾಮುಂಡಿ ಬೆಟ್ಟದಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಬೇಕೆಂದು ಮುಂದಿನ ವಾರ ನಿರ್ಧರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೋಮವಾರದಿಂದ ದೇವರ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ವಾರ ಜನರು ದೇಗುಲಕ್ಕೆ ಬಂದಾಗ ಯಾವ ರೀತಿ ನಡೆದುಕೊಳ್ಳುತ್ತಾರೆ ಎಂಬುದನ್ನು ಗಮನಿಸಲಾಗುವುದು. ಎಲ್ಲಕ್ಕಿಂತ ಪ್ರಮುಖವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವಿಚಾರದಲ್ಲಿ ಜನರು ಯಾವ ರೀತಿ ನಡೆದುಕೊಳ್ಳುತ್ತಾರೆ ಎಂಬುದನ್ನು ಗಮನಿಸುತ್ತೇವೆ. ಇದರ ಆಧಾರದ ಮೇಲೆ ಆಷಾಢ ಶುಕ್ರವಾರದಲ್ಲಿ ಏನು ಮಾಡಬೇಕೆಂದು ನಿರ್ಧರಿಸುತ್ತೇವೆ ಎಂದರು.
ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ಜೊತೆಯೂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ. ಕೊರೊನಾ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯವು ನಮಗೆ ಮುಖ್ಯ ಎಂದರು.
ದೆಹಲಿಯಿಂದ ಬೆಂಗಳೂರಿಗೆ ಬಂದು ಅಲ್ಲಿಂದ ಮೈಸೂರಿಗೆ ಬಂದಿರುವ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಅದೇ ರೀತಿ ತಮಿಳುನಾಡಿನಿಂದ ಮೈಸೂರಿಗೆ ಬಂದಿರುವ ವ್ಯಕ್ತಿಯಲ್ಲೂ ಕೊರೊನಾ ಪಾಸಿಟಿವ್ ಬಂದಿದೆ. ಈ ಬಗ್ಗೆ ಇಂದು ಸಂಜೆಯ ಹೆಲ್ತ್ ಬುಲಿಟಿನ್ನಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದರು.