ರಾಯಚೂರು: ಮಸ್ಕಿ ತಾಲೂಕಿನ 18 ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪ್‌ಗೌಡ ಪಾಟೀಲ್ ತಿಳಿಸಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನ 23 ಗ್ರಾಮ ಪಂಚಾಯಿತಿಗಳ 446 ಸ್ಥಾನಗಳ ಪೈಕಿ 310 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಇದರಲ್ಲಿ 18 ಗ್ರಾಮ ಪಂಚಾಯಿತಿಗಳಲ್ಲಿ ಸ್ಪಷ್ಟ ಬಹುಮತದಿಂದ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಎರಡು ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಸಮಬಲವಿದೆ. ಎರಡರಲ್ಲಿಯೂ ಸಹ ಬಿಜೆಪಿ ಬೆಂಬಲಿತರು ಅಧ್ಯಕ್ಷರಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಓದಿ: ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದ ಸಿಎಂ ಬಿಎಸ್ವೈಗೆ ತವರು ಜಿಲ್ಲೆಯಲ್ಲಿ ಸನ್ಮಾನ
ಗ್ರಾ.ಪಂ. ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆದಿದೆ ಎಂದು ಕಾಂಗ್ರೆಸ್ನವರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ವಾಸ್ತವವಾಗಿ ಎರಡು ಇಲ್ಲವೇ ಮೂರು ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಅಧಿಕಾರ ಪಡೆಯಬಹುದು ಎಂದರು.
ಜನವರಿ 15 ರೊಳಗೆ ಉಪ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದೆ. ಬಸವಕಲ್ಯಾಣ ಕ್ಷೇತ್ರದ ಚುನಾವಣೆ ಜತೆಗೆ ಮಸ್ಕಿ ಕ್ಷೇತ್ರಕ್ಕೂ ಚುನಾವಣೆ ನಡೆಯಲಿದೆ. ಈಗಾಗಲೇ ಉಪ ಚುನಾವಣೆಗೆ ಸಿದ್ಧತೆ ನಡೆಸಲಾಗಿದೆ. ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಪಡೆ ಸಜ್ಜು ಮಾಡಲಾಗುತ್ತಿದೆ. ಉಪ ಚುನಾವಣೆಯಲ್ಲಿ ಭಾರೀ ಬಹುಮತದಿಂದ ಜಯ ಸಾಧಿಸುವ ವಿಶ್ವಾಸವಿದೆ ಎಂದು ತಿಳಿಸಿದರು.