ರಾಯಚೂರು: ಟ್ರ್ಯಾಕ್ಟರ್ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಸ್ವಾನ್ನಪ್ಪಿರುವ ಘಟನೆ ರಾಯಚೂರಿನ ಹೊರವಲಯದಲ್ಲಿ ನಡೆದಿದೆ.
ನಗರದ ಜಿಲ್ಲಾ ಸಾಮಾಜಿಕ ಅರಣ್ಯ ಇಲಾಖೆಯ ಕಚೇರಿ ಬಳಿ ಈ ದುರ್ಘಟನೆ ಸಂಭವಿಸಿದೆ. ಮೃತನನ್ನು ಅರಬ್ ಮೊಹಲ್ಲ ಬಡಾವಣೆ ನಿವಾಸಿ ಮುತುಜಾ ಹುಸೇನ್ (50) ಎಂದು ಗುರುತಿಸಲಾಗಿದೆ. ನವೋದಯ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಮುತುಜಾ ಹುಸೇನ್ ಎಂದಿನಂತೆ ಮನೆಯಿಂದ ಸ್ಕೂಟಿಯ ಮೇಲೆ ತೆರಳುತ್ತಿದ್ದ. ಈ ವೇಳೆ ಯರಗೇರಾ ಗ್ರಾಮದ ರಸ್ತೆಯಿಂದ ಕಲ್ಲು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್ ಹಾಗೂ ಸ್ಕೂಟಿಯ ಮಧ್ಯೆ ಅಪಘಾತ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ರಾಯಚೂರು ನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಟ್ರ್ಯಾಕ್ಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ.