ರಾಯಚೂರು : ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿರುವ ಅಂಬೇಡ್ಕರ್ ವಸತಿ ನಿಲಯದ ವಿದ್ಯಾರ್ಥಿಗಳು ಮೂಲ ಸೌಲಭ್ಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ತಾಲೂಕಿನ ಹಟ್ಟಿ ಪಟ್ಟಣದಲ್ಲಿರುವ ಮೆಟ್ರಿಕ್ ನಂತರದ ಅಂಬೇಡ್ಕರ್ ವಸತಿ ನಿಲಯದಲ್ಲಿ ಮೂಲ ಸೌಲಭ್ಯಗಳ ಕೊರತೆಯಿದ್ದು, ಶುದ್ಧ ಕುಡಿವ ನೀರಿಲ್ಲ, ವಸತಿ ನಿಲಯದ ಕೊಠಡಿಯು ಸೋರುವ ಹಂತದಲ್ಲಿದ್ದು, ವಿದ್ಯುತ್ ಕೂಡ ಸರಿಯಾಗಿ ಪೊರೈಕೆಯಾಗುತ್ತಿಲ್ಲ ಎಂದು ಆರೋಪಿಸಿ ಎಸ್ಎಫ್ಐ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ವಸತಿ ನಿಲಯದಲ್ಲಿ ಕನಿಷ್ಠ ಮೂಲ ಸೌಕರ್ಯಗಳಿಲ್ಲದೇ ಸಮಸ್ಯೆಗಳಿಂದ ಬಳಲುತ್ತಿದೆ. ಸಾಕಷ್ಟು ಬಾರಿ ಈ ಬಗ್ಗೆ ವಿದ್ಯಾರ್ಥಿಗಳು ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಅವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳಿಗೆ ಓದಲು ಸೂಕ್ತ ವಾತಾವರಣವಿಲ್ಲದೇ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಸೂಕ್ತ ಮೂಲ ಸೌಲಭ್ಯಗಳನ್ನು ಒದಗಿಸಬೇಕೆಂದು ಅಧಿಕಾರಿಗಳಿಗೆ ಎಚ್ಚರಿಕೆ ಸಹ ನೀಡಿದರು.