ರಾಯಚೂರು: ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿಯ ಘಟನೆ ಪೂರ್ವ ನಿಯೋಜಿತವಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದಿರುವ ಗಲಭೆ ಪೂರ್ವ ನಿಯೋಜಿತ ಕೃತ್ಯವಾಗಿದೆ. ರಾಜಕೀಯ ಲಾಭಕ್ಕಾಗಿ ಒಂದು ಸಂಘಟನೆ ಕೃತ್ಯ ಎಸಗಿದೆ. ಆ ಸಂಘಟನೆಯನ್ನು ಮಟ್ಟ ಹಾಕಲು ಗಂಭೀರ ಚಿಂತನೆ ನಡೆದಿದೆ ಎಂದು ಸಚಿವರು ತಿಳಿಸಿದರು.
ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ ನವೀನ್‌ಗೂ, ಬಿಜೆಪಿಗೂ ಯಾವುದೇ ರೀತಿ ಸಂಬಂಧವಿಲ್ಲ. ಆ ವ್ಯಕ್ತಿ ಡಿಕೆಶಿ ಸೇರಿದಂತೆ ಹಲವರ ಕುರಿತಾಗಿ ಪೋಸ್ಟ್ ಮಾಡಿದ್ದಾನೆ. ಅದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಸೂಕ್ತ ಸಮಯದಲ್ಲಿ ಪುರಾವೆಯನ್ನು ಸಹ ಬಿಡುಗಡೆ ಮಾಡಲಾಗುವುದು. ಘಟನೆಯಲ್ಲಿ ಭಾಗಿಯಾದವರಿಗೆ ಕಾನೂನು ರೀತಿ ಶಿಕ್ಷೆಯಾಗಲಿದೆ. ಆಗಿರುವ ಹಾನಿಗೆ ಉತ್ತರ ಪ್ರದೇಶ ಮಾದರಿಯ ಆಸ್ತಿ ಮುಟ್ಟುಗೋಲಿಗೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಚರ್ಚೆ ನಡೆದಿದೆ. ಗೃಹ ಸಚಿವರು ಅಂತಿಮ ತಿರ್ಮಾನ ಕೈಗೊಳ್ಳಲಿದ್ದಾರೆ ಎಂದು ಸವದಿ ಹೇಳಿದರು.