ರಾಯಚೂರು: ಬಿಸಿಯೂಟ ಯೋಜನೆಯನ್ನು ಖಾಸಗೀಕರಣಗೊಳಿಸುವುದನ್ನು ನಿಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಬಿಸಿಯೂಟ ನೌಕರರು ಧರಣಿ ಆರಂಭಿಸಿದ್ದಾರೆ.
ಕರ್ನಾಟಕ ರಾಜ್ಯ ಬಿಸಿಯೂಟ ನೌಕರರ ಸಂಘ (ಸಿಐಟಿಯು ಸಂಯೋಜಿತ) ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.
ಬಿಸಿಯೂಟ ಯೋಜನೆಯಡಿ ದುಡಿಯುತ್ತಿರುವವರ ಪೈಕಿ ಶೇ 80ರಷ್ಟು ಹಿಂದುಳಿದ, ಕೆಳಸ್ತರದ ವರ್ಗದವರಿದ್ದಾರೆ. ಅವರಿಗೆ ನೀಡುತ್ತಿರುವ ವೇತನ ಕುಟುಂಬ ನಿರ್ವಹಣೆಗೆ ಸಾಕಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ರಾಜ್ಯದ 15 ಜಿಲ್ಲೆಗಳಲ್ಲಿ ಸರ್ಕಾರೇತರ ಸಂಘ ಸಂಸ್ಥೆಗಳು ನಿರ್ವಹಿಸುತ್ತಿವೆ. ಆದರೆ, ಅವು ಸರಿಯಾಗಿ ಕೆಲಸ ಮಾಡುತ್ತಿಲ್ಲ ಜನ ವಿರೋಧಿ ನೀತಿ ಅನುಸರಿಸುತಿವೆ. ಈ ಕೂಡಲೇ ಅಂತಹ ಸಂಸ್ಥೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಬಿಸಿಯೂಟ ಯೋಜನೆ ಖಾಸಗೀಕರಣ ಮಾಡಲು ಮುಂದಾಗಿರುವ ಸರ್ಕಾರ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು. ನಿವೃತ್ತಿ ಹೊಂದಿದ ಕಾರ್ಮಿಕರಿಗೆ ಪಿಂಚಣಿ ನೀಡಬೇಕು. ರಜೆ, ಪಿಎಫ್ ಹಾಗೂ ಸಾಮಾಜಿಕ ಭದ್ರತಾ ಯೋಜನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಬೇಕು ಎಂದು ಒತ್ತಾಯಿಸಿದರು.