ರಾಯಚೂರು: ಜಿಲ್ಲೆಯಲ್ಲಿ ಕೋವಿಡ್-19 ಸ್ಥಿತಿಗತಿ, ಪ್ರವಾಹ, ಅತಿವೃಷ್ಟಿ ಸೇರಿದಂತೆ ಇದುವರೆಗೂ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಡಿಯೋ ಸಂವಾದದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಿಸುವಲ್ಲಿ ಕೈಗೊಂಡ ಕ್ರಮಗಳು, ಪ್ರವಾಹ, ಅತಿವೃಷ್ಟಿ ಹಾಗೂ ಭೂ-ಕುಸಿತದಿಂದ ಉಂಟಾದ ಹಾನಿ ಮತ್ತು ಕ್ರಮಗಳ ಕುರಿತು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಒಟ್ಟು 8,792 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 6,914 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 112 ಜನರು ಕೊರೊನಾದಿಂದ ಮೃತ ಪಟ್ಟಿದ್ದಾರೆ ಎಂದು ತಿಳಿಸಿದರು. ಇನ್ನು ಜಿಲ್ಲೆಯಲ್ಲಿ ಇದುವರೆಗೂ ಸುರಿದ ಧಾರಕಾರ ಮಳೆ ಹಾಗೂ ಪ್ರವಾಹದಿಂದ ಒಟ್ಟು 34.15 ಕೋಟಿ ರೂ ಹಾನಿಯಾಗಿದೆ. ಜೂ.1 ರಿಂದ ಸೆ. 9ರವರೆಗೆ ಜಿಲ್ಲೆಯಲ್ಲಿ ಶೇ.35 ರಷ್ಟು ವಾಡಿಕೆಗಿಂತ ಉತ್ತಮ ಮಳೆಯಾಗಿರುವುದರಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಲ್ಲಿ ರೈತರು ನಿರತರಾಗಿದ್ದಾರೆ. ಭಾರೀ ಮಳೆ ಮತ್ತು ಪ್ರವಾಹದಿಂದ 16 ಜನರು ಮೃತಪಟ್ಟಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆಂದು ವಿವರಿಸಿದರು.
ಸಂವಾದದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಅಪರ ಜಿಲ್ಲಾಧಿಕಾರಿ ದುರಗೇಶ, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ, ರಿಮ್ಸ್ ನಿರ್ದೇಶಕ ಡಾ.ಬಸವರಾಜ ಪೀರಾಪುರ, ಡಾ.ಸುರೇಂದ್ರ ಬಾಬು, ಡಾ.ವಿಜಯಶಂಕರ್, ಡಾ.ನಾಗರಾಜ್, ಡಾ.ಗಣಪತಿ, ಡಾ.ಲಕ್ಷ್ಮಿಬಾಯಿ ಸೇರಿದಂತೆ ಇತರರು ಉಪಸ್ಥಿತರಿದ್ದರು.