ಮಸ್ಕಿ(ರಾಯಚೂರು): ಉಪ ಚುನಾವಣೆಗೆ ಇದ್ದಂತಹ ಕಾನೂನಾತ್ಮಕ ಸಮಸ್ಯೆ ದೂರವಾಗಿದ್ದು, ಚುನಾವಣೆ ದಿನಾಂಕ ಘೋಷಣೆ ಮುನ್ನವೇ ಕೈ-ಕಮಲ ಪಕ್ಷದ ಕಾರ್ಯ ಚಟುವಟಿಕೆಗಳು ಚುರುಕುಗೊಂಡಿವೆ. ಕಾಂಗ್ರೆಸ್ ಸ್ಥಳೀಯ ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಯೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ.
ಕ್ಷೇತ್ರದಲ್ಲಿ ಪಕ್ಷ ಸಂಘಟನೆಯೊಂದಿಗೆ ಉಪ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಮಸ್ಕಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಪಕ್ಷದ ಅಭ್ಯರ್ಥಿಯಾಗಿ ಯಾರನ್ನು ಆಯ್ಕೆ ಮಾಡಬೇಕು, ಪಕ್ಷದ ಪ್ರಚಾರ, ಕಾರ್ಯಕ್ರಮಗಳ ರೂಪುರೇಷಗಳು ಸೇರಿದಂತೆ ಉಪ ಚುನಾವಣೆ ಗೆಲುವು ಸಾಧಿಸುವುದರ ಕುರಿತಂತೆ ಡಿಕೆಶಿ ಮತ್ತು ಖಂಡ್ರೆಯೊಂದಿಗೆ ಚರ್ಚೆ ನಡೆಸಿದ್ದಾರೆ.
ಇತ್ತೀಚೆಗೆ ಮಾಜಿ ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸ್ಥಳೀಯ ಹಿರಿಯ ಮುಖಂಡರು, ಪಕ್ಷದ ಮುಖಂಡರು, ಕಾರ್ಯಕರ್ತರು ಪಕ್ಷದ ಕಾರ್ಯಕ್ರಮವೊಂದನ್ನು ಆಯೋಜಿಸುವ ಮೂಲಕ ಪಕ್ಷಕ್ಕೆ ದ್ರೋಹವೆಸಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಶಾಸಕ ಪ್ರತಾಪ ಗೌಡ ಪಾಟೀಲ್ಗೆ ತಕ್ಕ ಪಾಠ ಕಲಿಸಬೇಕೆಂದು ನಿರ್ಣಯ ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಪಕ್ಷ ತಂತ್ರ ರೂಪಿಸಿ, ಕಾರ್ಯಕರ್ತರು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಕರೆ ನೀಡುವ ಮೂಲಕ ಪ್ರಬಲ ಎದುರಾಳಿ ಪ್ರತಾಪ ಗೌಡ ಪಾಟೀಲ್ ವಿರುದ್ಧ ಕಹಳೆ ಮೊಳಗಿಸಿದ್ದಾರೆ.
ಸದ್ಯ ಮಸ್ಕಿ ಕಾಂಗ್ರೆಸ್ ಮುಖಂಡರು ಬೆಂಗಳೂರಿನಲ್ಲಿ ಕೆಪಿಸಿಸಿ ಮುಖಂಡರೊಂದಿಗೆ ಉಪ ಚುನಾವಣೆ ಕುರಿತಂತೆ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ಮೂಹೂರ್ತ ಫಿಕ್ಸ್ ಆಗುವ ಮೊದಲೇ ರಾಜಕೀಯ ಚಟುವಟಿಕೆಗಳು ಗದಿಗೆದರಿವೆ.
ಮಸ್ಕಿ ವಿಧಾನಸಭಾ ಉಪ ಚುನಾವಣೆ ಕುರಿತಂತೆ ಮುಖಂಡರೊಂದಿಗೆ ಸುದೀರ್ಘ ಚರ್ಚೆ ನಡೆಸಿ ಕ್ಷೇತ್ರದ ಚಿತ್ರಣವನ್ನು ಮುಖಂಡರ ಗಮನಕ್ಕೆ ತರಲಾಗಿದೆ. ಮುಂಬರುವ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಯಾರೆಂಬ ಬಗ್ಗೆ ಯೋಚನೆ ಬೇಡ, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಸೂಚನೆ ನೀಡಲಾಗಿದೆ. ಅದರಂತೆ ಮುನ್ನಡೆಯಲಾಗುವುದು ಎಂದು ಮಸ್ಕಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ತಿಳಿಸಿದ್ದಾರೆ.