ರಾಯಚೂರು: ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಯೋಜನೆ ರೂಪಿಸಿ, ಸಚಿವ ಸಂಪುಟದಲ್ಲಿ ಅನುಮೋದನೆ ತೆಗೆದುಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ನಗರದ ಡಿ.ಆರ್. ಮೈದಾನದದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ ಈಗಾಗಲೇ ಜಿಲ್ಲಾಧಿಕಾರಿಗೆ ಯೋಜನೆ ರೂಪಿಸಲು ಸೂಚನೆ ನೀಡಲಾಗಿದೆ. ಯೋಜನೆಯ ಬಗ್ಗೆ ಕ್ಯಾಬಿನೆಟ್ ಅನುಮೋದನೆ ಪಡೆದು ವಿಮಾನ ನಿಲ್ದಾಣ ಸ್ಥಾಪನೆಗೆ ಆದ್ಯತೆ ನೀಡಲಾಗುವುದು ಎಂದರು.
ಕೇಂದ್ರ ಸರ್ಕಾರದಿಂದ ಈಗಾಗಲೇ ಐಐಐಟಿ ಮಂಜೂರು ಮಾಡಲಾಗಿದ್ದು, ಇದರಿಂದ ಶೈಕ್ಷಣಿಕ ಅಭಿವೃದ್ಧಿಗೆ ಅನುಕೂಲವಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವನಾಗಿ ಜಿಲ್ಲೆಗೆ ಏಮ್ಸ್ ತರಲು ಪ್ರಾಮಾಣಿಕ ಪ್ರಯತ್ನ ಮಾಡುವ ಜತೆಗೆ ಹೋರಾಟಕ್ಕೆ ಸಿದ್ಧವಿದ್ದೇನೆ. ನಗರದ ಅಭಿವೃದ್ಧಿಗಾಗಿ 100 ಕೋಟಿ ರೂಪಾಯಿ ನೀಡಲಾಗಿದ್ದು, ಮಳೆಗಾಲದ ಬಳಿಕ ಕಾಮಗಾರಿಗೆ ಚಾಲನೆ ನೀಡಲಾಗುವುದು. ಅರಕೇರಾ ಗ್ರಾಮವನ್ನು ಚುನಾಯಿತ ಪ್ರತಿನಿಧಿಗಳ ಒತ್ತಾಯದ ಮೆರೆಗೆ ತಾಲೂಕಾಗಿ ಘೋಷಿಸಲಾಗಿದೆ ಎಂದರು.