ರಾಯಚೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರೈತರಿಗಾಗಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಯಕ್ರಮಗಳಿಗೆ ಇಲಾಖೆಯ ಅಧಿಕಾರಿಗಳು ಹೆಚ್ಚು ಹೆಚ್ಚು ಪ್ರಚಾರ ನೀಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಮೂಹ ಮಾಧ್ಯಮ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೃಷಿ ಚಟುವಟಿಕೆಗಳಿಗೆ ಬೇಕಾದ ವಿವಿಧ ಸಲಕರಣೆಗಳನ್ನು ಸಕಾಲಕ್ಕೆ ರೈತರಿಗೆ ತಲುಪಿಸುವುದು ಇಲಾಖೆಯ ಜವಬ್ದಾರಿಯಾಗಿದೆ. ಮುಂಗಾರು ಪ್ರಾರಂಭವಾಗಿರುವುದರಿಂದ ರೈತರಿಗೆ ಗೊಬ್ಬರ, ಕ್ರಿಮಿನಾಶಕ ಮತ್ತು ಯಂತ್ರೋಪಕರಣಗಳ ಕೊರತೆಯಾಗದಂತೆ ಹೆಚ್ಚಿನ ನಿಗಾವಹಿಸಬೇಕಾಗಿದೆ ಎಂದರು.
ಇಂದಿನ ಆಧುನಿಕ ಜಗತ್ತಿನಲ್ಲಿ ಹೊಸ ಹೊಸ ತಂತ್ರಜ್ಞಾನಗಳನ್ನು ಮಾರುಕಟ್ಟೆಗೆ ಪರಿಚಯಿಸಲಾಗುತ್ತಿದೆ. ಈ ಬಗ್ಗೆ ಪತ್ರಿಕೆಗಳಲ್ಲಿ ಪ್ರಚಾರ ಮಾಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕಾಗಿದೆ. ಸರ್ಕಾರದಿಂದ ರೈತರಿಗೆ ಸಿಗುವ ಎಲ್ಲಾ ಸೌರ್ಕಯಗಳನ್ನು ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದರು.
ಮುಂದಿನ 2 ತಿಂಗಳ ಕಾಲ ರೈತರಿಗೆ ದೊರೆಯುವ ಕಾರ್ಯಕ್ರಮಗಳ ಬಗ್ಗೆ ವ್ಯಾಪಕವಾಗಿ ಪ್ರಚಾರ ಮಾಡಬೇಕಾಗಿದೆ. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಟಂಟಂ ವಾಹನ ಮೂಲಕ ಪ್ರಚಾರ ಮಾಡಬೇಕು. ನಕಲಿ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಸೂಚಿಸಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಬೀದ್, ಸಹಾಯಕ ಕೃಷಿ ಅಧಿಕಾರಿ ಸಂದೀಪ್ ಇತರರು ಹಾಜರಿದ್ದರು.