ರಾಯಚೂರು: ಬೇಸಿಗೆ ಆರಂಭವಾಗಿದ್ದು, ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಲಕ್ಷಣಗಳಿವೆ. ಜಿಲ್ಲೆಯ ಗ್ರಾಮವೊಂದರಲ್ಲಿ ನಾಲ್ಕೈದು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆಯಿದ್ದು, ಬೇಸಿಗೆಯಲ್ಲಿ ಸಮಸ್ಯೆ ಮತ್ತಷ್ಟು ಉಲ್ಬಣವಾಗಲಿದೆ.
ಕೃಷ್ಣ, ತುಂಗಭದ್ರಾ ಎರಡು ನದಿಗಳ ಮಧ್ಯೆ ಇರುವ ರಾಯಚೂರು ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು. ರಾಯಚೂರು ತಾಲೂಕಿನ ಎಲ್.ಕೆ. ದೊಡ್ಡಿ (ಲಿಂಗಖಾನ್ ದೊಡ್ಡಿ) ಯಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪರಡಾಡುತ್ತಿದ್ದಾರೆ.
ಎಲ್.ಕೆ. ದೊಡ್ಡಿಯಲ್ಲಿ ಸುಮಾರು 500ಕ್ಕೂ ಹೆಚ್ಚು ಮನೆಗಳಿವೆ. ಗ್ರಾಮದಲ್ಲಿ ಬೋರ್ವೆಲ್ ಕೊರೆಸಲಾಗಿದೆ. ಆದ್ರೆ ಬೋರ್ವೆಲ್ ಸರಿಯಾದ ನಿರ್ವಹಣೆಯಿಲ್ಲದೆ ನೀರು ಬರುತ್ತಿಲ್ಲ. ಹೀಗಾಗಿ ಕೂಲಿನಾಲಿ ಮಾಡಿ ಬದುಕುವ ಜನರು ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳ ಗಮನಕ್ಕೆ ತರಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮದ ಮಹಿಳೆಯರು ದೂರಿದ್ದಾರೆ.
ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಎಚ್ಚೆತ್ತು ಸಮರ್ಪಕ ಕುಡಿಯುವ ನೀರು ಒದಗಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.