ರಾಯಚೂರು: ಜಿಲ್ಲಾ ಉಸ್ತುವರಿ ಸಚಿವರ ಅಧ್ಯಕ್ಷತೆಯಲ್ಲಿ ಇಂದು ಬರ ಪರಿಹಾರ ಕಾಮಗಾರಿಗಳ ಪರಿಶೀಲನಾ ಸಭೆ ನಡೆಯಿತು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಬರ ಪರಿಹಾರ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯಲ್ಲಿ ಆವರಿಸಿರುವ ತೀವ್ರ ಬರಗಾಲದ ಕುಡಿಯುವ ನೀರಿನ ಸರಬರಾಜು, ನರೇಗಾ ಕಾಮಗಾರಿ, ಕೃಷಿ ಇಲಾಖೆ ಸೇರಿದಂತೆ ಮೇವು ಸಂಗ್ರಹಣೆ ಕುರಿತಂತೆ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಭಾಗವಹಿಸಿದ್ದ ಕೆಲ ಅಧಿಕಾರಿಗಳು ಸರಿಯಾದ ಮಾಹಿತಿ ಕೊಡದಿದ್ದಕ್ಕೆ ಕೋಪಗೊಂಡ ಸಚಿವ ವೆಂಕಟ್ರಾವ್ ನಾಡಗೌಡ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಇದರಿಂದಾಗಿ ಸಭೆಯಲ್ಲಿ ಕೆಲ ಕಾಲ ನಿಶ್ಯಬ್ದ ವಾತಾವರಣ ನಿರ್ಮಾಣವಾಯಿತು. ಬಳಿಕ ಬರ ನಿರ್ವಹಣೆಗೆ ಯಾವುದೇ ಹಣದ ಕೊರತೆಯಿಲ್ಲ. ಮಾಡಬೇಕಾದ ಕಾಮಗಾರಿ ನಿರ್ವಹಿಸುತ್ತಿಲ್ಲ. ಸಭೆಗೆ ಸುಳ್ಳು ಮಾಹಿತಿ ನೀಡುತ್ತಿದ್ದೀರಾ ಎಂದು ತರಾಟೆಗೆ ತೆಗೆದುಕೊಂಡರು.
ಇನ್ನು ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವೆಂಕಟರಾವ್ ನಾಡಗೌಡ, ಸರ್ಕಾರದಲ್ಲಿ ಬರಗಾಲ ನಿರ್ವಹಿಸುವುದಕ್ಕೆ ಹಣದ ಕೊರತೆಯಿಲ್ಲ. ಅಲ್ಲಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಸೂಚಿಸಲಾಗಿದೆ. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಪ್ರತಿ ತಾಲೂಕಿಗೆ ಒಂದೂವರೆ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ ಎಂದರು.